ADVERTISEMENT

ಸಿಸಿಬಿ ಕಾರ್ಯಾಚರಣೆ: ₹ 75 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 17:11 IST
Last Updated 17 ಮಾರ್ಚ್ 2021, 17:11 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ₹ 75 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಜೋಸೆಫ್ ಎಂಡುಕ್ವೆ (38) ಮತ್ತು ಯುಜೋಚುಕ್ವು ಮಾರ್ಕ್ವೆರಿಕ್ (38) ಬಂಧಿತರು. ಅಮೃತಹಳ್ಳಿ ಹಾಗೂ ಯಲಹಂಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿಗಳು, ಮನೆಯಲ್ಲೇ ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಆರೋಪಿಗಳು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳ ಬಳಿ ಕೊಕೇನ್, ಎಕ್ಸ್‌ಟೆಸ್ಸಿ, ಎಲ್‌ಎಸ್‌ಡಿ ಕಾಗದ ಚೂರುಗಳು ಹಾಗೂ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ADVERTISEMENT

‘ಪ್ರವಾಸಿ ಹಾಗೂ ಉದ್ಯೋಗ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿಗಳು, ವೀಸಾ ಅವಧಿ ಮುಗಿದರೂ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದರು. ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಎನ್‌ಡಿಪಿಎಸ್‌ ಕಾಯ್ದೆ ಹಾಗೂ ವಿದೇಶಿಗರ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದೂ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.