ADVERTISEMENT

ಅದಾನಿ ಪ್ರಕರಣ | ಕೇಂದ್ರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ: ಸಚಿನ್ ಪೈಲಟ್ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 5:30 IST
Last Updated 19 ಫೆಬ್ರುವರಿ 2023, 5:30 IST
ಸಚಿನ್ ಪೈಲಟ್
ಸಚಿನ್ ಪೈಲಟ್   

ಬೆಂಗಳೂರು: ‘ಅದಾನಿ ಸಮೂಹದ ವಿರುದ್ಧ ತನಿಖೆಗೆ ಕೇಂದ್ರ ಸರ್ಕಾರ ಜಂಟಿ ಸದನ ಸಮಿತಿ ರಚಿಸಬೇಕು’ ಎಂದು ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಆಗ್ರಹಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂರಾರು ಕೋಟಿ ಮೊತ್ತದ ಹಗರಣಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಏನೋ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ’ ಎಂದು ದೂರಿದರು.

‘ನಾವು ಕೇಳಿದ ಪ್ರಶ್ನೆಗಳಲ್ಲಿ ಒಂದಕ್ಕೂ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿಲ್ಲ‌. ಖಾಸಗಿ ಮಾಲೀಕತ್ವ ಹಾಗೂ ಸಣ್ಣ ಉದ್ದಿಮೆಗಳ ಕಾರ್ಯನಿರ್ವಹಣೆಯ ಬಗ್ಗೆ ನಾವು ಕೇಳಿದ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಜಂಟಿ ಸದನ ಸಮಿತಿ ರಚಿಸುವ ಬೇಡಿಕೆಗೂ ಬೆಲೆ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಕೇಂದ್ರ ಸರ್ಕಾರದ ಅಧೀನದಲ್ಲಿಯೇ ಎಲ್ಲಾ ತನಿಖಾ ಸಂಸ್ಥೆಗಳಿದ್ದು, ನಮ್ಮ ಯಾವ ಮನವಿಗೂ ಪುರಸ್ಕಾರ ಸಿಗುತ್ತಿಲ್ಲ. ಅವರು ಅನಗತ್ಯವಾಗಿ ಜನರ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದಾರೆ’ ಎಂದರು.

‘ಕಾಂಗ್ರೆಸ್ ಪಕ್ಷದ ಸಾಧನೆಯನ್ನು ತನ್ನ ಸಾಧನೆ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ, ಮೋದಿ ಸರ್ಕಾರ ಜಾರಿಗೆ ತಂದ ಯಾವ ಕಾರ್ಯಕ್ರಮವೂ ಯಶಸ್ವಿಯಾಗಿಲ್ಲ. ಅನಗತ್ಯವಾಗಿ ರಾತ್ರೋರಾತ್ರಿ ಕಾಯ್ದೆಗಳನ್ನು ಜಾರಿಗೆ ತಂದು ಆರ್ಥಿಕ ಹೊರೆಯನ್ನು ಜನರ ಮೇಲೆ ಹೊರಿಸುತ್ತಿದ್ದಾರೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಜನ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲಿದ್ದಾರೆ’ ಎಂದರು.

‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.