ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ರಾಚೇನಹಳ್ಳಿ-ದಾಸರಹಳ್ಳಿ ಕೆರೆಯ ಸಮೀಪದಲ್ಲಿರುವ ಮಾದರಿ ಪಾರಂಪರಿಕ ಗ್ರಾಮ- ‘ರಂಗೋಲಿ ಗಾರ್ಡನ್ಸ್’ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರಿಂದ 18ರವರೆಗೆ ‘ಸಂಗಮ-2024’ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ರಂಗೋಲಿ ಗಾರ್ಡನ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್.ವಿ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾದರಿ ಪಾರಂಪರಿಕ ಗ್ರಾಮದ ಬಗ್ಗೆ ಜನರಿಗೆ ಹೆಚ್ಚಿನ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ‘ಸಂಗಮ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.
‘ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾಲ್ಕು ದಿನಗಳು ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಗಳು, ಮಕ್ಕಳಿಂದ ನಿರ್ಮಾಣಗೊಂಡ ಪಾರಂಪರಿಕ ಮನೆಗಳ ಮಾದರಿಗಳ ಪ್ರದರ್ಶನ, ಸೌಂದರ್ಯ ಮತ್ತು ಸಾಂಸ್ಕೃತಿಕ ಕಲೆಗಳ ಪ್ರದರ್ಶನ ಏರ್ಪಡಿಸಲಾಗಿದೆ. ಇದರೊಂದಿಗೆ ಪಾರಂಪರಿಕ ತಿಂಡಿಗಳ ತಯಾರಿಕೆ, ಕರಕುಶಲ ವಸ್ತುಗಳ ಪ್ರದರ್ಶನ, ಕಾರ್ಯಾಗಾರ, ಸಂಗೀತ ಮತ್ತು ನೃತ್ಯ ಪ್ರದರ್ಶನಗಳು ನಡೆಯಲಿವೆ’ ಎಂದು ಅವರು ಮಾಹಿತಿ ನೀಡಿದರು.
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಆವರಣದಲ್ಲಿ ಮೂರೂವರೆ ಎಕರೆ ಪ್ರದೇಶದಲ್ಲಿ ಮಾದರಿ ಪಾರಂಪರಿಕ ಗ್ರಾಮ ‘ರಂಗೋಲಿ ಗಾರ್ಡನ್ಸ್’ ನಿರ್ಮಾಣ ಮಾಡಲಾಗಿದೆ. ಮುಂದಿನ ಪೀಳಿಗೆಗೆ ಗ್ರಾಮೀಣ ಸಂಸ್ಕೃತಿ, ಪರಂಪರೆ, ಹಳ್ಳಿಜೀವನ ಶೈಲಿಯನ್ನು ಪರಿಚಯಿಸುವ ದೃಷ್ಟಿಯಿಂದ ಇದನ್ನು ನಿರ್ಮಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.