
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ಟಿ.ಎಸ್. ನಾಗಾಭರಣ, ಸಿ. ಸೋಮಶೇಖರ್, ಕೆ.ಆರ್. ಸಂಧ್ಯಾರೆಡ್ಡಿ, ಗರ್ತಿಕೆರೆ ರಾಘಣ್ಣ ಮತ್ತು ನರಸಿಂಹಲು ವಡವಾಟಿ ಅವರಿಗೆ 2025ರ ಸಂಸ್ಕೃತಿ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಪ್ರಸ್ತುತ ಸಮಾಜದಲ್ಲಿ ಶ್ರೀಮಂತಿಕೆ ಹಾಗೂ ಅಧಿಕಾರವನ್ನು ಪೂಜಿಸಲಾಗುತ್ತಿದೆ. ಇಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು.
ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಪ್ರತಿಷ್ಠಾನ ಭಾನುವಾರ ಆಯೋಜಿಸಿದ್ದ ಸಂಸ್ಕೃತಿ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಹಿಂದೆ ಒಳ್ಳೆಯ ಕೆಲಸ ಮಾಡಿದವರನ್ನು ಸಮಾಜ ಗುರುತಿಸುತ್ತಿತ್ತು. ತಪ್ಪು ಮಾಡಿದವರಿಗೆ ಕಾನೂನಿನಡಿ ಶಿಕ್ಷೆ ನೀಡುವುದರ ಜತೆಗೆ, ಸಮಾಜವು ಬಹಿಷ್ಕಾರದಂತಹ ಶಿಕ್ಷೆ ವಿಧಿಸುತ್ತಿತ್ತು. ಶ್ರೀಮಂತಿಕೆ, ಅಧಿಕಾರದ ಮೇಲೆ ನಿಂತಿರುವ ಈಗಿನ ಸಮಾಜದಲ್ಲಿ, ಪ್ರಾಮಾಣಿಕತೆ ಬಗ್ಗೆ ಮಾತನಾಡುವುದೇ ಅಪರಾಧವೆಂಬ ವಾತಾವರಣ ನಿರ್ಮಾಣವಾಗಿದೆ’ ಎಂದು ಹೇಳಿದರು.
‘ದೇಶದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಕೊಳ್ಳೆ ಹೊಡೆಯಲಾಗುತ್ತಿದೆ. ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಭ್ರಷ್ಟರಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು. ಆದರೆ, ಅಧಿಕಾರದಲ್ಲಿರುವವರ ಸ್ವಾರ್ಥ ಮತ್ತು ದುರಾಸೆಯು ಭ್ರಷ್ಟಾಚಾರವನ್ನು ಪೋಷಿಸುತ್ತಿದೆ’ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸುಗಮ ಸಂಗೀತ ಕಲಾವಿದ ಗರ್ತಿಕೆರೆ ರಾಘಣ್ಣ, ಕ್ಲಾರಿಯೋನೇಟ್ ಕಲಾವಿದ ನರಸಿಂಹಲು ವಡವಾಟಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಸೋಮಶೇಖರ್, ರಂಗ ನಿರ್ದೇಶಕ ಟಿ.ಎಸ್. ನಾಗಾಭರಣ ಹಾಗೂ ಜಾನಪದ ವಿದ್ವಾಂಸರಾದ ಕೆ.ಆರ್. ಸಂಧ್ಯಾರೆಡ್ಡಿ ಅವರಿಗೆ 2025ನೇ ಸಾಲಿನ ಸಂಸ್ಕೃತಿ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಮಣಶ್ರೀ ಗ್ರೂಪ್‌ನ ಅಧ್ಯಕ್ಷ ಎಸ್.ಷಡಕ್ಷರಿ, ಪ್ರತಿಷ್ಠಾನದ ಅಧ್ಯಕ್ಷ ವೇಮಗಲ್ ನಾರಾಯಣಸ್ವಾಮಿ, ಗೌರವ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.