ADVERTISEMENT

ರಸ್ತೆಗೆ ಸರೋಜಾದೇವಿ ಹೆಸರಿಡುವ ಬಗ್ಗೆ ಜಿಬಿಎ ಜೊತೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜುಲೈ 2025, 12:29 IST
Last Updated 15 ಜುಲೈ 2025, 12:29 IST
   

ಬೆಂಗಳೂರು: ‘ಬಹುಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡುವ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಜೊತೆ ಚರ್ಚಿಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಅವರು ಮಾಹಿತಿ ನೀಡಿದ್ದಾರೆ.

‘ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ ಸರೋಜಾದೇವಿ ಅವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

‘ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ‘ಅಭಿನವ ಸರಸ್ವತಿ’ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಸರೋಜಾದೇವಿ ಅವರು ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು’ ಎಂದಿದ್ದಾರೆ.

‘ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಸರೋಜಾದೇವಿ ಅವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡುವ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆ ಚರ್ಚಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.