
ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು
ಗಂಭೀರವಾಗಿ ಪರಿಗಣಿಸದೇ ಇರುವ ಅಧಿಕಾರಿಗಳ ಮೇಲೆ ಕ್ರಮ
ಕೈಗೊಳ್ಳಲಾಗುವುದು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಜಿಲ್ಲೆಯ 6 ಪಂಚಾಯಿತಿಗಳಲ್ಲಿ ಎಸ್‌ಸಿಎಸ್‌ಪಿ- ಟಿಎಸ್‌ಪಿ ಹಣ ದುರುಪಯೋಗ ಸಂಬಂಧ ತನಿಖಾ ತಂಡಗಳನ್ನು ರಚಿಸಲಾಗಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅಡಿ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಾಗಿ
ಅರ್ಹರಿಗೆ ಸೌಲಭ್ಯ ತಲುಪಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ, ಡಿಪ್ಲೊಮಾ/ಐಟಿಐ, ಡಿಗ್ರಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಪ್ರತಿ ಎರಡನೇ ಭಾನುವಾರ ದಲಿತರ ಸಭೆಯನ್ನು ಠಾಣಾ ಮಟ್ಟದಲ್ಲಿ ನಡೆಸಬೇಕು. ಮುಖಂಡರನ್ನು ಆಹ್ವಾನಿಸಿ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಯತೀಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ್ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರವೀಂದ್ರನಾಥ್ ಮೇಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.