ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಬಲೀಕರಣ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಕೋಶಗಳ ಕಚೇರಿಗಳನ್ನು ಪ್ರಭಾರ ಕುಲಪತಿ ಪ್ರೊ.ಕೆ.ಆರ್.ಜಲಜಾ ಮಂಗಳವಾರ ಉದ್ಘಾಟಿಸಿದರು. ಕುಲಸಚಿವ ಪ್ರೊ.ಬಿ.ರಮೇಶ್ ಪರೀಕ್ಷಾಪೂರ್ವ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ರಮೇಶ್ ಅವರು, ‘ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ನೆರವು ಒದಗಿಸಲು ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ತಿಳಿಸಿದರು.
‘ರೋಸ್ಟರ್ ಪದ್ಧತಿ, ಹಾಸ್ಟೆಲ್ ಸೌಲಭ್ಯ ಸೇರಿದಂತೆ ವಿದ್ಯಾರ್ಥಿಗಳ ಕುಂದು ಕೊರತೆಗಳ ನಿವಾರಣೆಗೆ ಈ ಕೋಶಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲಿವೆ’ ಎಂದು ಅವರು ವಿವರಿಸಿದರು.
‘ಪರೀಕ್ಷಾಪೂರ್ವ ತರಬೇತಿ ಕೇಂದ್ರದ ಮೂಲಕ ಜ್ಞಾನಜ್ಯೋತಿ ಕ್ಯಾಂಪಸ್‌ನಲ್ಲಿ ಓದುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಸೂಕ್ತ ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.
‘ವಿದ್ಯಾರ್ಥಿಗಳಿಗೆ ಕೌಶಲ ತರಬೇತಿಯ ಮೂಲಕ ವೃತ್ತಿಪರ ಪರಿಣತಿ ದೊರಕಿಸಿಕೊಡಲಾಗುವುದು. ಪ್ರತಿವರ್ಷ ಉದ್ಯಮ ವಲಯದ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು’ ಎಂದು ಅವರು ವಿವರಿಸಿದರು.
ಬಿಸಿಯು ಸಿಂಡಿಕೇಟ್ ಸದಸ್ಯರಾದ ಬಿ.ಆರ್. ಸುಪ್ರೀತ್. ಎಚ್. ಕೃಷ್ಣರಾಮ್, ಕೆ.ಪಿ.ಪಾಟೀಲ್, ಶಿಲ್ಪಶ್ರೀ, ಪಿ.ಎಂ.ಚೈತ್ರಾ, ಆಯಿಷಾ ಫರ್ಜಾನಾ ಹಾಗೂ ಪ್ರಾಧ್ಯಾಪಕರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.