ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯವರ ಸಮಗ್ರ ಸಮೀಕ್ಷಾ ಕಾರ್ಯ ಖಾತರಿಪಡಿಸಿಕೊಳ್ಳಲು ಮನೆಗಳಿಗೆ ಸ್ಟಿಕರ್ ಅಂಟಿಸಲಾಗುತ್ತಿದೆ.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದ್ದು, ಜೂನ್ 30ರವರೆಗೆ ಕಾಲಾವಕಾಶವಿದೆ. ನಗರದಾದ್ಯಂತ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ಪ್ರತಿ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿರುವ ಕುರಿತು ಖಾತರಿಪಡಿಸಿಕೊಂಡು ಸ್ಟಿಕರ್ ಅಂಟಿಸಲಾಗುತ್ತದೆ.
ಸ್ಟಿಕ್ಕರ್ ಅಂಟಿಸುವ ಕಾರ್ಯಕ್ಕೆ ಕಾಲೇಜುಗಳ ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳ ಸ್ವಯಂಸೇವಕರ ತಂಡಗಳನ್ನು ರಚಿಸಲಾಗಿದೆ. ಯಾವುದಾದರೂ ಮನೆಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದಲ್ಲಿ ಸ್ಟಿಕ್ಕರ್‌ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಆನ್‌ಲೈನ್ ಮೂಲಕ ಸ್ವಯಂ ಪ್ರೇರಿತವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಮೂಡಿಸಲಿದ್ದಾರೆ. ಹತ್ತಿರದ ಬೆಂಗಳೂರು ಒನ್, ಬಿಬಿಎಂಪಿ ವಾರ್ಡ್ ಕಚೇರಿಗಳಲ್ಲೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.