ADVERTISEMENT

ಶಾಲೆ ಬಿಟ್ಟ ಮಕ್ಕಳ ಸಂಖ್ಯೆ 70,116

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 19:39 IST
Last Updated 17 ಜೂನ್ 2019, 19:39 IST

ಬೆಂಗಳೂರು: ‘ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅನುಸರಿಸಬೇಕಾದ ಕ್ರಮಗಳ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರೂಪಿಸಿರುವ ಕರಡು ನೀತಿಯನ್ನು ಹಾಜರುಪಡಿಸಿ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿಯ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು, ‘ರಾಜ್ಯದಾದ್ಯಂತ ಒಟ್ಟು 70,116 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ’ ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ADVERTISEMENT

‘ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸುವುದಕ್ಕಾಗಿ ರಚಿಸಲಾಗಿರುವ ಸಮಿತಿಯ ನೀತಿ ಅನುಷ್ಠಾನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿಲ್ಲ’ ಎಂದು ನ್ಯಾಯಪೀಠ ಅತೃಪ್ತಿ ವ್ಯಕ್ತಪಡಿಸಿತು.

‘ಜುಲೈ 12ರೊಳಗೆ ಉನ್ನತ ಮಟ್ಟದ ಸಮಿತಿ ರಚಿಸಿರುವ ಕರಡು ನೀತಿಯನ್ನು ಕೋರ್ಟ್‌ಗೆ ಹಾಜರುಪಡಿಸಬೇಕು’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.