ADVERTISEMENT

‘‍ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ಸಿನಲ್ಲಿ ಸ್ಕೌಟ್ಸ್‌ ಪಾತ್ರ ದೊಡ್ಡದು’

ಭಾರತ್ ಸ್ಕೌಟ್ಸ್-ಗೈಡ್ಸ್ 102ನೇ ರಾಜ್ಯ ಪರಿಷತ್ ಮಹಾಸಭೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 19:58 IST
Last Updated 20 ಡಿಸೆಂಬರ್ 2020, 19:58 IST

ಬೆಂಗಳೂರು: ‘ಕೋವಿಡ್‌ ಬಿಕ್ಕಟ್ಟಿನ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಪ್ರಮುಖ ಪಾತ್ರ ವಹಿಸಿತ್ತು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್ ಹೇಳಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 102ನೇ ರಾಜ್ಯ ಪರಿಷತ್ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸುಮಾರು 8.50ಲಕ್ಷ ವಿದ್ಯಾರ್ಥಿಗಳನ್ನೊಳಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಂದರ್ಭದಲ್ಲಿ ಸ್ಕೌಟ್ಸ್‌ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್‌ ಹಂಚಿದ್ದರು. ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವವಹಿಸಿದ್ದರು’ ಎಂದು ಶ್ಲಾಘಿಸಿದರು.

‘ಜ.1ರಿಂದ ಎಸ್ಸೆಸ್ಸೆಲ್ಸಿ ತರಗತಿ, ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ. ಈ ವೇಳೆಯೂ ಮುಂಜಾಗ್ರತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರ ನೆರವು ಅಗತ್ಯವಿದೆ‍’ ಎಂದರು.

ADVERTISEMENT

ಹಿರಿಯ ಸಾಹಿತಿ ಡಾ. ಗೊ.ರು.ಚನ್ನಬಸಪ್ಪ, ‘ದೇಶದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿರಲಿ, ಯಾವುದೇ ಹೊಸ ವ್ಯವಸ್ಥೆ ಜಾರಿಗೆ ಬರಲಿ. ಅದರ ಕಾರ್ಯ ವೈಖರಿಯನ್ನು ನೋಡುವ ಮತ್ತು ಅದರಿಂದಾಗುವ ಪರಿಣಾಮಗಳ ಕುರಿತು ತಿಳಿದುಕೊಳ್ಳುವ ಸಹನೆ ಬೇಕಾಗುತ್ತದೆ. ಆದರೆ, ಅದು ಈಗಿನ ಸಮಾಜದಲ್ಲಿ ಕಡಿಮೆ ಅಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಒಮ್ಮೆ ಸ್ಕೌಟ್ಸ್ ಮತ್ತು ಗೈಡ್ಸ್ ಆದರೆ ಸೇವೆ ಮತ್ತು ಶಿಸ್ತಿನಲ್ಲಿ ಲೀನ ಆಗಿದ್ದೀರಿ ಎಂದರ್ಥ. ಸಮರ್ಥ ನಾಯಕ ಆತ್ಮವಿಶ್ವಾಸದಿಂದ ಹುಟ್ಟಿಕೊಳ್ಳುತ್ತಾನೆ. ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ನಿಭಾಯಿಸಲು ಇಂತಹ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ, ಉಪಾಧ್ಯಕ್ಷ ಕೊಂಡಜ್ಜಿ ಬ.ಷಣ್ಮುಖಪ್ಪ, ರಾಜ್ಯ ಆಯುಕ್ತ ಎಂ.ಎ.ಖಾಲಿದ್, ಗೀತಾ ನಟರಾಜ್, ರಾಜ್ಯ ಕಾರ್ಯದರ್ಶಿ ಗಂಗಪ್ಪಗೌಡ ಉಪಸ್ಥಿತರಿದ್ದರು.

***

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಬೇಡಿಕೆ ಬಂದಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
-ಎಸ್. ಸುರೇಶ್‌ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.