ADVERTISEMENT

SCSP, TSP ಅನುದಾನ ದುರುಪಯೋಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 16:04 IST
Last Updated 12 ಜನವರಿ 2026, 16:04 IST
ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನ ದುರುಪಯೋಗ ತಡೆಯುವಂತೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ ಚಿತ್ರ.
ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನ ದುರುಪಯೋಗ ತಡೆಯುವಂತೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರಜಾವಾಣಿ ಚಿತ್ರ.   

ಬೆಂಗಳೂರು: ‘ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ನಿಗದಿತ ಯೋಜನೆಗಳಿಗೆ ಬಳಸಬೇಕು. ಅನುದಾನ ದುರುಪಯೋಗಪಡಿಸಿಕೊಳ್ಳುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

‘ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ದಿಗೆಂದೇ ರೂಪಿಸಿರುವ ಯೋಜನೆ ಅನುದಾನವನ್ನು ಅದೇ ಸಮುದಾಯದವರ ಅಭಿವೃದ್ದಿಗೆ ಬಳಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಈ ಅನುದಾನ ಬಳಕೆ ಮಾಡಬಾರದು. ದುರ್ಬಳಕೆಗೆ ಕಾರಣವಾಗುತ್ತಿರುವ ಸೆಕ್ಷನ್‌ ಅನ್ನು ರದ್ದುಪಡಿಸಬೇಕು’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಂಬೇಡ್ಕರ್‌ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಆರ್‌.ಕೋದಂಡರಾಮ್‌ ಒತ್ತಾಯಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್‌ ಅಡಿಯ ವಸತಿ ಶಾಲೆಗಳನ್ನು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಬೇಕು. ಈ ಶಾಲೆಗಳಲ್ಲಿನ ಅಕ್ರಮಗಳ ಕುರಿತು ತನಿಖೆಯಾಗಬೇಕು. ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಬೇಕು’  ಎಂದು ಆಗ್ರಹಿಸಿದರು.

ADVERTISEMENT

‘ಅಂಬೇಡ್ಕರ್ ಅವರು ರಾಜ್ಯದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣಕ್ಕೆ ₹10 ಕೋಟಿ ಹೆಚ್ಚುವರಿ ಅನುದಾನ ನೀಡಬೇಕು. ಬೆಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಬಳಿ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸೇನೆಯ ಎಂ.ಆನಂದಕುಮಾರ್‌, ಜೆ.ಈ.ಮಂಜುನಾಥ್‌, ಎಂ.ಕೆ.ಕಾಂತರಾಜ್‌, ಕಾರ್ಯದರ್ಶಿ ಶರಣು ಎಸ್‌.ಜಮಖಂಡಿ, ಕಾಶೀನಾಥ್‌ ನಾಟೇಕರ್‌, ರಾಜೇಂದ್ರ ಬಾಬು, ಬೆಂಗಳೂರು ನಗರ ಅಧ್ಯಕ್ಷ ಆರ್‌.ಅನಿಲ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.