ಕೆ.ಆರ್.ಪುರ: ಕಾಂಗ್ರೆಸ್ ಸರ್ಕಾರ ರಾಜಕೀಯ ಲಾಭಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್.ಪಿ.ಐ- ಅಠವಾಳೆ) ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಕೆ.ಆರ್.ಪುರ ಸಮೀಪದ ವಿಜಿನಾಪುರದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಮತಾ ಸೈನಿಕ ದಳದ ಕೆ.ಆರ್. ಪುರ ಮತ್ತು ವಿಜಿನಾಪುರ ನೂತನ ಶಾಖೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಆರ್‌ಪಿಐ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದಲಿತ ಚಳವಳಿ ನಾಗೇಶ್ ಮಾತನಾಡಿ, ‘ವಿಜಿನಾಪುರ ಭಾಗದಲ್ಲಿ ಸುಮಾರು ವರ್ಷಗಳಿಂದ ನೂರಾರು ಬಡ ಕುಟುಂಬಗಳು ವಾಸಿಸುತ್ತಿವೆ. ಯಾವುದೇ ಸರ್ಕಾರ ಬಂದರೂ ಇಲ್ಲಿನ ಜನರಿಗೆ ಹಕ್ಕುಪತ್ರ ನೀಡುತ್ತಿಲ್ಲ. ಹಾಗಾಗಿ ಹೋರಾಟ ಅನಿವಾರ್ಯ’ ಎಂದು ಎಚ್ಚರಿಸಿದರು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಾಳೆ) ರಾಜ್ಯ ಘಟಕದ ಅಧ್ಯಕ್ಷ ಸತೀಶ್, ರಾಜ್ಯ ಸಮಿತಿ ಸದಸ್ಯ ಅಂಬರೀಶ್, ರೂಪಕಲಾ, ನಾರಾಯಣಪ್ಪ, ಶ್ರೀನಿವಾಸ್, ಮರಿಯಪ್ಪ, ರಾಜೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.