ADVERTISEMENT

ಮೀಸಲಾತಿ ಹೆಚ್ಚಳಕ್ಕೆ ತಯಾರಿ; ಉಪ ಸಮಿತಿ ರಚನೆಗೆ ತೀರ್ಮಾನ

ಪರಿಶಿಷ್ಟ ಜಾತಿ, ಪಂಗಡಗಳ ಬೇಡಿಕೆಗೆ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 0:44 IST
Last Updated 19 ನವೆಂಬರ್ 2020, 0:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂಬ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಸೂಕ್ತ ಶಿಫಾರಸು
ಗಳನ್ನು ಪಡೆಯಲು ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಉಪ ಸಮಿತಿ ರಚನೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಡಲಾಗಿದೆ.

ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ 15ರಿಂದ 17ಕ್ಕೂ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಹೋರಾಟಗಳು ನಡೆದಿವೆ. ಈ ವರ್ಗಗಳಿಗೆ ಸೇರಿದ ಸಚಿವರು ಸರ್ಕಾರದ ಮೇಲೂ ಒತ್ತಡ ಹೇರುತ್ತಲೇ ಬಂದಿದ್ದಾರೆ.

ADVERTISEMENT

ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಈ ವಿಷಯ ಪ್ರಸ್ತಾಪವಾಯಿತು. ಸಂಪುಟ ಉಪ ಸಮಿತಿ ರಚಿಸಿ ಸೂಕ್ತ ತೀರ್ಮಾನಕ್ಕೆ ಬರಬೇಕು ಎಂದು ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ.

‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ನಿಗದಿ ಮಾಡಿ ಬಹಳ ವರ್ಷಗಳೇ ಕಳೆದಿವೆ. ಈಗ ಜನಸಂಖ್ಯೆಯೂ ಹೆಚ್ಚಾಗಿದೆ. ಮೀಸಲಾತಿ ಪ್ರಮಾಣವನ್ನು ಪರಿಷ್ಕರಿಸಬೇಕು ಎಂಬ ಒತ್ತಾಯ ಪ್ರಬಲವಾಗಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸಂಪುಟ ಉಪ ಸಮಿತಿ ಸುದೀರ್ಘವಾಗಿ ಚರ್ಚಿಸಿ ಸರ್ಕಾರಕ್ಕೆ ಶೀಘ್ರವೇ ಶಿಫಾರಸು ನೀಡಲಿದೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಕುರಿತು ಮಾತನಾಡಿದ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ‘ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಹಲವು ಸಂಘ–ಸಂಸ್ಥೆಗಳು ಒತ್ತಡ ಹೇರುತ್ತಲೇ ಬಂದಿವೆ. ನ್ಯಾ.ನಾಗಮೋಹನ್ ದಾಸ್‌ ಅವರ ಅಧ್ಯಕ್ಷತೆಯ ಆಯೋಗವೂ ಸರ್ಕಾರಕ್ಕೆ ಈ ಸಂಬಂಧ ವರದಿಯನ್ನು ನೀಡಿದೆ. ಸಂಪುಟ ಉಪ ಸಮಿತಿಯು ಆ ವರದಿಯ ಪರಾಮರ್ಶೆ ನಡೆಸಲಿದೆ’ ಎಂದರು.

‘ಮರಾಠಾ ಪ್ರಾಧಿಕಾರವಲ್ಲ, ನಿಗಮ’
‘ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪ್ರಾಧಿಕಾರದ ಬದಲು ನಿಗಮ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.‘ಪ್ರಾಧಿಕಾರ ಮಾಡಬೇಕಾದರೆ ಪ್ರತ್ಯೇಕ ಕಾನೂನು ಮಾಡಬೇಕಾಗುತ್ತದೆ. ನಿಗಮದ ಸ್ಥಾಪನೆಯನ್ನು ಸರ್ಕಾರವೇ ಮಾಡಬಹುದಾಗಿದೆ. ನಿಗಮಕ್ಕೆ ಎಷ್ಟು ಹಣ ನಿಗದಿ ಮಾಡಬೇಕು ಎಂಬುದು ನಿರ್ಧಾರ ಆಗಿಲ್ಲ’ ಎಂದು ಹೇಳಿದರು.

‘ವೀರಶೈವ– ಲಿಂಗಾಯತ ಅಭಿವೃದ್ಧಿ ನಿಗಮದ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕೆ ಹಣ ನಿಗದಿ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.