ಬೆಂಗಳೂರು: ರಿಯಲ್ ಎಸ್ಟೇಟ್ ಕ್ಷೇತ್ರದ ಪ್ರತಿಷ್ಠಿತ ಕಂಪನಿಯೊಂದರ ಕಚೇರಿಗಳ ಮೇಲೆ ಮಂಗಳವಾರ ದಾಳಿಮಾಡಿದ ಆದಾಯ ತೆರಿಗೆ (ಐ.ಟಿ.) ಇಲಾಖೆ ಅಧಿಕಾರಿಗಳು, ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿದರು.
ರಿಯಲ್ ಎಸ್ಟೇಟ್ ಕಂಪನಿಯು ಮಹಾತ್ಮ ಗಾಂಧಿ ರಸ್ತೆ, ಶಿವಾಜಿನಗರ ಸೇರಿದಂತೆ ನಗರದ ವಿವಿಧೆಡೆ ಹೊಂದಿರುವ ನಾಲ್ಕು ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿಮಾಡಿದ ಐ.ಟಿ. ಅಧಿಕಾರಿಗಳು, ತಡರಾತ್ರಿಯವರೆಗೂ ದಾಖಲೆಗಳ ಶೋಧ ನಡೆಸಿದರು. ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದಾಯ ತೆರಿಗೆ ಇಲಾಖೆಯ 50ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರು ಮಾತ್ರವಲ್ಲದೇ, ಗೋವಾದಿಂದಲೂ ಅಧಿಕಾರಿಗಳನ್ನು ಕಾರ್ಯಾಚರಣೆಗಾಗಿ ಕರೆಸಲಾಗಿತ್ತು. ಕಂಪನಿಯ ವಹಿವಾಟು, ಆಸ್ತಿಗಳ ಮಾರಾಟ, ಹೂಡಿಕೆ, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.