ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ವಿಶೇಷ ಪರಿಹಾರ ಬೋಧನಾ ತರಗತಿಗಳು ನಡೆಸಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ ಕಳೆದ ಶೈಕ್ಷಣಿಕ ವರ್ಷ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎಂದು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ತಿಳಿಸಿದೆ.
ರಾಜ್ಯದಲ್ಲಿ 4,000ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ಕಾಲೇಜುಗಳಲ್ಲಿ ಪ್ರಾಂಶುಪಾಲರನ್ನು ಬಿಟ್ಟರೆ ಉಳಿದ ಎಲ್ಲರೂ ಅತಿಥಿ ಉಪನ್ಯಾಸಕರುಗಳೇ ಆಗಿದ್ದಾರೆ. ಆದ್ದರಿಂದ ತರಗತಿಗಳಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಬಗ್ಗೆ ಪದವಿ ಪೂರ್ವ ಇಲಾಖೆ ಸ್ಪಷ್ಟನೆ ನೀಡಬೇಕು ಎಂದು ಸಂಘಟನೆ ಅಧ್ಯಕ್ಷ ಪದ್ಮಪ್ರಭ ಇಂದ್ರ ಆಗ್ರಹಿಸಿದ್ದಾರೆ.
ಅವಶ್ಯಕತೆ ಇರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಅತಿಥಿ ಉಪನ್ಯಾಸಕರು ಬೋಧನಾ ತರಗತಿಗಳನ್ನು ನಡೆಸಿಕೊಡಲು ಸಿದ್ಧ. ಆದರೆ, ಸರ್ಕಾರ ಮತ್ತು ಪದವಿ ಪೂರ್ವ ಇಲಾಖೆ ಸೂಕ್ತ ಗೌರವಧನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮಾರ್ಚ್‌ನಲ್ಲಿ ನಡೆದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಮಾರ್ಚ್ ತಿಂಗಳ ಗೌರವಧನ ನೀಡಿಲ್ಲ. ಕೂಡಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರಿಗೆ ಮಾರ್ಚ್ ತಿಂಗಳ ಗೌರವಧನ ನೀಡಬೇಕು ಎಂದು ಕಾರ್ಯದರ್ಶಿ ರಾಜೇಶ್ ಭಟ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.