ಬಂಧನ
ಬೆಂಗಳೂರು: ಶಾಲಾ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ರ್‍ಯಾಗಿಂಗ್ ಮಾಡಿದ ಆರೋಪದ ಮೇಲೆ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಇಂಟರ್‌ನ್ಯಾಷನಲ್ ಸ್ಕೂಲ್‌ನ ಹಾಸ್ಟೆಲ್ ವಾರ್ಡನ್ ಹಾಗೂ ಆರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಂಸ್ಥೆಯ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಮಗನ ಮೇಲೆ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ನಡೆದ ಬಗ್ಗೆ ಸಂತ್ರಸ್ತನ ಪೋಷಕರು ನೀಡಿದ ದೂರಿನ ಮೇರೆಗೆ ಬನ್ನೇರುಘಟ್ಟ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ದೌರ್ಜನ್ಯದ ಬಗ್ಗೆ ತಿಳಿದಿದ್ದರೂ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾದ ಕಾರಣ ಹಾಸ್ಟೆಲ್ ವಾರ್ಡನ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಶಾಲೆಯ ಆರು ಹಿರಿಯ ವಿದ್ಯಾರ್ಥಿಗಳು 15 ವರ್ಷದ ಬಾಲಕನನ್ನು ಗುರಿಯಾಗಿಸಿಕೊಂಡು ಸೆಪ್ಟೆಂಬರ್ ಮೊದಲ ವಾರದಲ್ಲಿ ನಾಲ್ಕು ದಿನ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ವಿವಸ್ತ್ರಗೊಳಿಸಿ ನೃತ್ಯ ಮಾಡುವಂತೆ ಒತ್ತಾಯಿಸಿದ್ದಾರೆ. ನೃತ್ಯ ಮಾಡುವುದನ್ನು ನಿಲ್ಲಿಸಿದಾಗ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದೇ ರೀತಿ 3–4 ದಿನ ವಿದ್ಯಾರ್ಥಿಗಳ ಗುಂಪು ನಡೆದುಕೊಂಡಿದೆ. ಇದರಿಂದ ಬಾಲಕ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.