ADVERTISEMENT

ಹರ್ಷ ಕೊಲೆ ಪ್ರಕರಣ | ಉನ್ನತ ತನಿಖೆ ಯೋಚನೆ ಸದ್ಯಕ್ಕಿಲ್ಲ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 19:48 IST
Last Updated 24 ಫೆಬ್ರುವರಿ 2022, 19:48 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ‘ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸುವ ಯೋಚನೆ ಸದ್ಯಕ್ಕಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರುವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಖ್ಯಮಂತ್ರಿ, ಹಿರಿಯ ಅಧಿಕಾರಿಗಳ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ. ಅಲ್ಲಿನ ಅಧಿಕಾರಿಗಳ ಜೊತೆಗೂ ಪರಿಸ್ಥಿತಿಯ ಬಗ್ಗೆ ಚರ್ಚೆ ಮಾಡುತ್ತೇನೆ’ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರನ್ನು ತುಂಡು ತುಂಡು ಮಾಡುತ್ತೇನೆ ಎಂದು ಕಲಬುರಗಿಯಲ್ಲಿ ಹೇಳಿಕೆ ನೀಡಿರುವ ಮುಕ್ರಂ ಖಾನ್‌ ಎಂಬವರು ತಲೆಮರೆಸಿಕೊಂಡಿದ್ದು, ಬಂಧಿಸುವ ಕೆಲಸ ಮಾಡುತ್ತೇವೆ’ ಎಂದರು.

ADVERTISEMENT

‘ಅನ್ಯ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಅನುದಾನ’

ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪಯೋಜನೆಯ (ಟಿಎಸ್‌ಪಿ) ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸುತ್ತಿರುವುದಕ್ಕೆ ‘ದಸಂಸ’ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.

ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸದಂತೆ ಕಾಯ್ದೆ ರೂಪಿಸಲಾಗಿತ್ತು. ಈ ಕಾಯ್ದೆಯ 7(ಡಿ) ಕಲಂ ಅಡಿಯಲ್ಲಿ ಅನ್ಯ ಉದ್ದೇಶಕ್ಕೆ ಬಳಸಲು ಅನುಮತಿ ಕಲ್ಪಿಸಲಾಯಿತು. ಇದೇ ಅವಕಾಶ ಬಳಸಿಕೊಂಡು ಮೆಟ್ರೊ ಸೇರಿ ವಿವಿಧ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಒಕ್ಕೂಟದ ಮುಖಂಡ ವಿ. ನಾಗರಾಜ್‌ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

2022–23ರ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆ ಆಧಾರದಲ್ಲಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ಸಮುದಾಯದ ನಿರುದ್ಯೋಗಿ ಯುವಕರಿಗೆ ಸಾಲ ಸೌಲಭ್ಯವನ್ನು ಸುಲಭವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು. ಪರಿಶಿಷ್ಟ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಬೆಲೆ ಏರಿಕೆಗೆ ಅನುಗುಣವಾಗಿ ವಿದ್ಯಾರ್ಥಿ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಮುಂಬರುವ ಬಜೆಟ್‌ನಲ್ಲಿ ಪರಿಶಿಷ್ಟರ ಯೋಜನೆಗಳಿಗೆ ಮೀಸಲಿಡಬೇಕಾದ ಅನುದಾನ ಹಾಗೂ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆಯ ಅನುಷ್ಠಾನ ಕುರಿತು ಒಕ್ಕೂಟದ ವತಿಯಿಂದ ಇದೇ 26ರಂದು ಬೆಳಿಗ್ಗೆ 10.30ಕ್ಕೆ ವಸಂತನಗರದ ಲಿಡ್ಕರ್‌ ಭವನದಲ್ಲಿ ಸಂವಾದ ಆಯೋಜಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.