ADVERTISEMENT

ಕಾರಂತ ಬಡಾವಣೆ: ಎರಡು ತಿಂಗಳಲ್ಲಿ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 18:54 IST
Last Updated 28 ಜೂನ್ 2021, 18:54 IST
ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್
ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್   

ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯಲ್ಲಿ 2008ರಿಂದ 2018ರ ಅವಧಿಯಲ್ಲಿ ನಿರ್ಮಾಣವಾಗಿರುವ ಕಟ್ಟಡಗಳಿಗೆ ಸಂಬಂಧಿಸಿದಂತೆ ಎರಡು ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ತಿಳಿಸಿದರು.

ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ 17 ಹಳ್ಳಿಗಳ 3,546 ಎಕರೆ ಭೂಮಿ ಸ್ವಾಧೀನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 2008ರ ಡಿಸೆಂಬರ್‌ 30ರಂದು ಮೊದಲ ಅಧಿಸೂಚನೆ ಪ್ರಕಟಿಸಿತ್ತು. ಈ ಅಧಿಸೂಚನೆಯನ್ನು 2014ರ ನ.26ರಂದು ಹೈಕೋರ್ಟ್‌ ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್‌ಗೆ ಬಿಡಿಎ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್‌ ಆದೇಶವನ್ನು 2018ರ ಆಗಸ್ಟ್ 3ರಂದು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು.

2008ರಿಂದ 2018ರ ಅವಧಿಯಲ್ಲಿ ಸಾಕಷ್ಟು ಕಟ್ಟಡಗಳು ನಿರ್ಮಾಣವಾಗಿದ್ದು, ಎಷ್ಟು ಕಟ್ಟಡಗಳು ನಿರ್ಮಾಣ ಆಗಿವೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು.

ADVERTISEMENT

‘10 ವರ್ಷಗಳ ಅವಧಿಯಲ್ಲಿ ಅನೇಕ ಬಡಾವಣೆಗಳ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನುಮೋದನೆ ನೀಡಿದೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲವನ್ನೂ ಪರಾಮರ್ಶಿಸಿ ಆಗಸ್ಟ್ ಅಂತ್ಯದೊಳಗೆ ವರದಿ ಸಲ್ಲಿಸಲಾಗುವುದು’ ಎಂದು ಎ.ವಿ. ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಈವರೆಗೆ 3,580 ಅರ್ಜಿಗಳು ಬಂದಿವೆ. ಈ ಬಗ್ಗೆ ಮಧ್ಯಂತರ ವರದಿಯನ್ನೂ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು. ಇನ್ನೂ 2 ಸಾವಿರಕ್ಕಿಂತ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ ಇದೆ’ ಎಂದು ಹೇಳಿದರು.

‘ಸಮಿತಿಯ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಅದು ವಿಚಾರಣೆಗೆ ಬರಲಿದೆ. ಅಲ್ಲದೇ, ಪೊಲೀಸ್ ಠಾಣೆಗೂ ದೂರು ಸಲ್ಲಿಕೆಯಾಗಿದೆ’ ಎಂದು ವಿವರಿಸಿದರು.

ಸಹಾಯ ಕೇಂದ್ರ ಮತ್ತೆ ಆರಂಭ
ದಾಖಲೆ ಸಹಿತ ಅರ್ಜಿ ಸಲ್ಲಿಸಲು ಎರಡು ಕಡೆ ಸಹಾಯ ಕೇಂದ್ರಗಳನ್ನು ಜುಲೈ 1ರಿಂದ ಮತ್ತೆ ಆರಂಭಿಸಲಾಗುವುದು ಎಂದು ಎ.ವಿ. ಚಂದ್ರಶೇಖರ್ ತಿಳಿಸಿದರು.

‘ಕೋವಿಡ್ ಕಾರಣದಿಂದ ನಾಲ್ಕೂ ಸಹಾಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಸೋಂಕಿನ ಪ್ರಮಾಣ ಕಡಿಮೆ ಆಗಿರುವುದರಿಂದ ಮೇಡಿ ಅಗ್ರಹಾರದ ಸರ್ಕಾರಿ ಉರ್ದು ‍ಪ್ರಾಥಮಿಕ ಶಾಲೆ ಮತ್ತು ಸೋಮಶೆಟ್ಟಿಹಳ್ಳಿ ಸಮುದಾಯ ಭವನದಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗುವುದು’ ಎಂದರು.

‘ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ಈ ಕೇಂದ್ರಗಳು ಕಾರ್ಯ ನಿರ್ವಹಿಸಲಿವೆ. ಕೋವಿಡ್‌ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ಜನರ ಸ್ಪಂದನೆ ನೋಡಿಕೊಂಡು ಉಳಿದೆರಡು ಕೇಂದ್ರಗಳನ್ನೂ ತೆರೆಯಲಾಗುವುದು’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.