ಬೆಂಗಳೂರು: ‘ಭಾರತ್ ಬಂದ್ ವೇಳೆ ನಡೆದ ಗೂಂಡಾಗಿರಿಯ ನೇತೃತ್ವವನ್ನು ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ವಹಿಸಿದ್ದರು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದರು.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ನಗರದಲ್ಲಿ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿ ಗೂಂಡಾಗಿರಿ ಮೆರೆದಿದ್ದಾರೆ. ಇದೊಂದು ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಕಿಡಿಕಾರಿದರು.
‘ಬಂದ್ ವೇಳೆ ಉಡುಪಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿತ್ತು. ಆದರೆ, ನಮ್ಮ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.
‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಮುಖ್ಯಮಂತ್ರಿ ದೇವಸ್ಥಾನಗಳಿಗಷ್ಟೇ ಭೇಟಿ ನೀಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದೊಂದು ಗೊತ್ತುಗುರಿ ಇಲ್ಲದ ಸರ್ಕಾರ. ಶಾಸಕರು ಹಾಗೂ ಸಚಿವರು ಅನುದಾನ ಕೇಳಿದರೆ ಸಾಲ ಮನ್ನಾದ ನೆಪ ಹೇಳುತ್ತಾರೆ. ಆದರೆ, ರೈತರ ಸಾಲ ಮನ್ನಾ ಆಗಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.