ADVERTISEMENT

Krishna Janmashtami | ಮೀಸಲಾತಿ ಹೆಚ್ಚಳಕ್ಕೆ ಕೇಂದ್ರಕ್ಕೆ ಆಗ್ರಹ; ಸಿಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2023, 22:21 IST
Last Updated 6 ಸೆಪ್ಟೆಂಬರ್ 2023, 22:21 IST
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೃಷ್ಣ ವೇಷಧಾರಿ ದೇವರಾಜ್ ಅವರಿಗೆ ಹಸ್ತಲಾಘವ ಮಾಡಿದರು. ಶಿವರಾಜ ತಂಗಡಗಿ, ವಿಧಾನ ಪರಿಷತ್ತಿನ ಸದಸ್ಯ ಎಂ. ನಾಗರಾಜ್ ಯಾದವ್ ಇದ್ದಾರೆ –ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೃಷ್ಣ ವೇಷಧಾರಿ ದೇವರಾಜ್ ಅವರಿಗೆ ಹಸ್ತಲಾಘವ ಮಾಡಿದರು. ಶಿವರಾಜ ತಂಗಡಗಿ, ವಿಧಾನ ಪರಿಷತ್ತಿನ ಸದಸ್ಯ ಎಂ. ನಾಗರಾಜ್ ಯಾದವ್ ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಯಾದವ ಸಮುದಾಯ ಸೇರಿ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಪರವಾಗಿ ನಾವಿದ್ದೇವೆ. ಮೀಸಲಾತಿ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘ ಜಂಟಿಯಾಗಿ ನಗರದಲ್ಲಿ ಬುಧವಾರ ಆಯೋಜಿಸಿದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. 

‘ಮೀಸಲಾತಿ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಲು ಮೀಸಲಾತಿ ಹೆಚ್ಚಳ ಅತ್ಯಗತ್ಯ. ಈ ಬಗ್ಗೆ ಕಾನೂನು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದರು. 

ADVERTISEMENT

‘ಹಿಂದುಳಿದ ಸಮುದಾಯದವರಿಗೆ ಭೂಮಿ ಸಿಗಬೇಕು. ಈ ಹಿಂದೆ ಬೆಂಗಳೂರು ನಗರದಲ್ಲಿ ಸುಮಾರು 80 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿತ್ತು. ಯಾದವ ಸಮುದಾಯಕ್ಕೆ ಯಶವಂತಪುರದಲ್ಲಿ ಜಾಗ ನೀಡಲಾಗಿತ್ತು. ಇರುವ ಜಾಗದಲ್ಲಿ ಶಿಕ್ಷಣ ಸಂಸ್ಥೆ ನಿರ್ಮಿಸಬೇಕು. ಅಗತ್ಯ ಅನುದಾನವನ್ನೂ ನೀಡಲಾಗುವುದು. ಎಲ್ಲ ಯಾದವ ಜನಾಂಗದವರು ಶಿಕ್ಷಣ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ‘ಸಮಾಜ ಸಂಘಟನೆಯಾಗಬೇಕೆಂಬ ಉದ್ದೇಶದಿಂದ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಮೀಸಲಾತಿ ಹೆಚ್ಚಳ ಸೇರಿ ಯಾದವ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸಮುದಾಯದ ಮುಖಂಡರ ಜತೆಗೆ ಮತ್ತೊಮ್ಮೆ ಸಭೆ ನಡೆಸಲಾಗುವುದು’ ಎಂದು ಹೇಳಿದರು. 

ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಶ್ರೀನಿವಾಸ್ ಯಾದವ್, ‘ಪ್ರವರ್ಗ 1ರಡಿ ಶೇ 4ರಷ್ಟು ಮೀಸಲಾತಿ ನೀಡಲಾಗಿದೆ. ಸಮುದಾಯ 45 ಲಕ್ಷ ಜನರನ್ನು ಹೊಂದಿದ್ದು, ರಾಜ್ಯದ ಎಲ್ಲೆಡೆ ಇದ್ದಾರೆ. ಇದರಿಂದಾಗಿ ಮೀಸಲಾತಿಯನ್ನು ಹೆಚ್ಚಿಸಬೇಕು. ಯಾದವ ಮಠದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಅನುದಾನ ನೀಡಬೇಕು. ಸರ್ಕಾರ ನೀಡಿದ ನಿವೇಶನದಲ್ಲಿ ಶಾಲೆ ನಿರ್ಮಿಸಲು ಮುಂದಾಗಿದ್ದು, ಅದಕ್ಕೆ ಕೂಡ ಸರ್ಕಾರ ಅನುದಾನ ಒದಗಿಸಬೇಕು’ ಎಂದು ಆಗ್ರಹಿಸಿದರು.

ಚಿತ್ರದುರ್ಗ ಜಿಲ್ಲೆ ಶ್ರೀ ಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.