ADVERTISEMENT

ಮೆಟ್ರೊ ಪ್ರಯಾಣ ದರ ಇಳಿಸುವಂತೆ BMRCL ಎಂಡಿಗೆ ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2025, 4:50 IST
Last Updated 13 ಫೆಬ್ರುವರಿ 2025, 4:50 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೆಟ್ರೊ ಪ್ರಯಾಣ ದರ ಏರಿಕೆ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ’ ಎಂದು ಹೇಳಿದ್ದಾರೆ.

‘ನಮ್ಮ ಮೆಟ್ರೊ’ ಪ್ರಯಾಣ ದರವನ್ನು ಎಷ್ಟು ಹೆಚ್ಚಳ ಮಾಡಿದೆ ಎಂಬ ಬಗ್ಗೆ ಲೆಕ್ಕಾಚಾರ ಇಲ್ಲದೇ ಮೆಟ್ರೊದಲ್ಲಿ ಪ್ರಯಾಣಿಸಿದಾಗ ಬೆಲೆ ದುಪ್ಪಟ್ಟಾಗಿರುವುದನ್ನು ಕಂಡು ಪ್ರಯಾಣಿಕರು ಅವಕ್ಕಾಗಿದ್ದಾರೆ. ದುಬಾರಿ ದರ ನಿಗದಿ ಮಾಡಿರುವುದನ್ನು ಖಂಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.