ಬೆಂಗಳೂರು: ‘ರಿಯಲ್ ಎಸ್ಟೇಟ್ ಮಾಫಿಯಾ ಜತೆಗೆ ಕೈಜೋಡಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಚಯವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಮಾಫಿಯಾದ ಜತೆಗೆ ಕೈ ಜೋಡಿಸುವ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ದಂಧೆಗೆ ಬೆಂಬಲ ನೀಡಬಾರದು. ಅಪರಾಧಿಗಳಿಗೆ ಭಯದ ವಾತಾವರಣ ಹಾಗೂ ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು’ ಎಂದು ಸೂಚಿಸಿದರು.
‘ರಾಜ್ಯದಲ್ಲಿ ಜನಸಂಖ್ಯೆ ಏಳು ಕೋಟಿ ದಾಟಿದೆ. ಜನರ ಆಸ್ತಿ ರಕ್ಷಣೆ ಹಾಗೂ ಸಮಾಜದಲ್ಲಿ ನೆಮ್ಮದಿ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸರ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯ ಸೌಲಭ್ಯ, ಹೊಸ ಕಟ್ಟಡ ನಿರ್ಮಿಸಲು ಸರ್ಕಾರ ಬದ್ಧ ಇದೆ’ ಎಂದು ಭರವಸೆ ನೀಡಿದರು.
‘ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಗೂ ವೇಗ ಸಿಗಲಿದೆ. ಹೀಗಾಗಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಉತ್ತಮವಾಗಿ ನಡೆಸಿಕೊಳ್ಳಿ’ ಎಂದು ಸೂಚಿಸಿದರು.
ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ‘ರಾಜ್ಯದಲ್ಲಿ ಕೊಲೆ, ಸುಲಿಗೆಯಂತಹ ಅಪರಾಧ ಚಟುವಟಿಕೆಗಳು ಕಡಿಮೆ ಆಗಿವೆ. ಆದರೆ, ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಿದ್ದು, ಆ ಅಪರಾಧ ಪ್ರಕರಣಗಳನ್ನು ತಗ್ಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ರಾಷ್ಟ್ರದಲ್ಲೇ ಮೊದಲ ಬಾರಿಗೆ ಸೈಬರ್ ವಿಭಾಗಕ್ಕೆ ಡಿಜಿಪಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸಲಾಗುತ್ತಿದೆ. ದತ್ತಾಂಶ ಕಳವು ಜಾಲವನ್ನು ತಡೆಗಟ್ಟಲೂ ಪ್ರಯತ್ನಿಸಲಾಗುತ್ತಿದೆ’ ಎಂದು ತಿಳಿಸಿದರು.
‘ಬೆಂಗಳೂರಿನಲ್ಲಿ ಮಹಿಳೆಯರ, ಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದೆ. ನಿರ್ಭಯಾ ಯೋಜನೆ ಅಡಿ ಬೆಂಗಳೂರಿನಲ್ಲಿ ₹650 ಕೋಟಿ ವೆಚ್ಚದಲ್ಲಿ ಸಿಸಿಟಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ’ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಮನುಷ್ಯಲ್ಲಿರುವ ಅತ್ಯಂತ ಶ್ರೇಷ್ಠವಾದ ಗುಣ ನಂಬಿಕೆ. ಹೀಗಾಗಿ ಜನರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಪೊಲೀಸರು ಉಳಿಸಿಕೊಳ್ಳಬೇಕು’ ಎಂದು ಹೇಳಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ರಾಮಚಂದ್ರ ರಾವ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉಪಸ್ಥಿತರಿದ್ದರು.
ಪೊಲೀಸರು ತಮ್ಮ ಕರ್ತವ್ಯ ಸಮವಸ್ತ್ರ ಘನತೆಗೆ ಎಂದೂ ಕಳಂಕ ತಂದುಕೊಳ್ಳಬಾರದು. ಪೊಲೀಸರನ್ನು ರಾಜಕಾರಣಿಗಳೂ ಬಳಸಿಕೊಳ್ಳಬಾರದುಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ
‘ಗೃಹ ಯೋಜನೆ’ ಮುಂದುವರಿಕೆ: ಭರವಸೆ
‘ಪೊಲೀಸ್ ವಸತಿ ಗೃಹ ಯೋಜನೆ’ಯನ್ನು ರಾಜ್ಯ ಸರ್ಕಾರ ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ‘ಕಾನೂನು ಸುವ್ಯವಸ್ಥೆ ಕಾಪಾಡಲು ಕಾನ್‌ಸ್ಟೆಬಲ್ ಎಎಸ್ಐ ಪಿಎಸ್‌ಐ ಇನ್‌ಸ್ಪೆಕ್ಟರ್‌ಗಳು ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಅವರ ಯೋಗ ಕ್ಷೇಮ ನೋಡಿಕೊಳ್ಳವುದು ಸರ್ಕಾರದ ಜವಾಬ್ದಾರಿ’ ಎಂದರು. ಪರಮೇಶ್ವರ ಮಾತನಾಡಿ ‘ಪೊಲೀಸ್ ವಸತಿ ನಿಗಮದಿಂದ ಇಲಾಖೆಯ ಅಧಿಕಾರಿ ಸಿಬ್ಬಂದಿಗೆ ₹28 ಲಕ್ಷ ವೆಚ್ಚದಲ್ಲಿ ಎರಡು ಕೊಠಡಿಗಳ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುತ್ತಿದೆ’ ಎಂದು ಹೇಳಿದರು. ‘ಪೊಲೀಸರಿಗೆ ವಾಸಕ್ಕೆ ಯೋಗ್ಯವಾದ ಮನೆ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪೊಲೀಸ್ ವಸತಿ ಗೃಹ ಯೋಜನೆ ಆರಂಭಿಸಲಾಗಿತ್ತು. ಇದರ ಅಡಿ ಶೇ 46ರಷ್ಟು ಮನೆಗಳನ್ನು ನಿರ್ಮಿಸಲಾಗಿದೆ’ ಎಂದು ಹೇಳಿದರು. ‘ವಸತಿಗೆ ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡಿದರೆ ಇಲಾಖೆಯ ಸಿಬ್ಬಂದಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಅನುಕೂಲ ಆಗಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.