ADVERTISEMENT

ಸಿದ್ದರಾಮಯ್ಯ ಬೆಂಬಲಿಗರಿಂದ ಜೈಕಾರ, ಭಾವಚಿತ್ರಕ್ಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 17 ಮೇ 2023, 7:00 IST
Last Updated 17 ಮೇ 2023, 7:00 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು? ಎಂದು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸುವ ಮೊದಲೇ ಶಿವಾನಂದ ವೃತ್ತದಲ್ಲಿರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಮುಂಭಾಗದಲ್ಲಿ ಅವರ ಬೆಂಬಲಿಗರು, ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತಿದ್ದಾರೆ.

ನಿವಾಸದ ಪ್ರವೇಶದ್ವಾರದಲ್ಲಿ ಅಳವಡಿಸಿರುವ ಸಿದ್ದರಾಮಯ್ಯ ಅವರ ಭಾವಚಿತ್ರದ ಬ್ಯಾನರ್‌ಗೆ

ಪೂಜೆ ಮಾಡಿ, ತೆಂಗಿನ ಕಾಯಿ ಒಡೆದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ADVERTISEMENT

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಅವರ ನಿವಾಸ ಕಡೆಗೆ ಬರುತ್ತಿದ್ದಾರೆ. ಮನೆಯ ಸುತ್ತಮುತ್ತ ಪೊಲೀಸ್‌ ಬಂದೋಬಸ್ತು ಮತ್ತಷ್ಟು ಹೆಚ್ಚಿಸಲಾಗಿದೆ. ಭದ್ರತೆಗಾಗಿ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿ.ಕೆ. ಶಿವಕುಮಾರ್ ಅವರಿಗೆ​ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಸುವ ಸಾಧ್ಯತೆ ಇದೆ. ಅಲ್ಲದೆ, ಶಿವಕುಮಾರ್‌ ಅವರಿಗೆ ಇಂಧನ ಮತ್ತು ನೀರಾವರಿ ಈ ಎರಡು ಪ್ರಮುಖ ಖಾತೆಗಳನ್ನು ನೀಡುವ ಸಾಧ್ಯತೆ ಇದೆಯೂ ಇದೆ ಎಂಬ ಮಾಹಿತಿಯಿದೆ.

ಮುಖ್ಯಮಂತ್ರಿ ಘೋಷಣೆಗೂ ಮೊದಲೇ ಪ್ರಮಾಣ ವಚನ ಸಮಾರಂಭಕ್ಕೂ ತಯಾರಿ ಆರಂಭವಾಗಿದೆ. ಹಲವು ವರ್ಷಗಳ ಬಳಿಕ ಹೆಚ್ಚಿನ ಸೀಟುಗಳಲ್ಲಿ ಗೆದ್ದಿರುವುದರಿಂದ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಯೋಜಿಸಿದೆ. ಹೀಗಾಗಿ ವಿಧಾನಸೌಧದ ಮುಂಭಾಗ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.