ADVERTISEMENT

‘ನಿರಾಶ್ರಿತರಿಗೆ ಆರು ಎಕರೆ ಜಾಗ’

ಕಾಚರಕನಹಳ್ಳಿ ಕಾರ್ಮಿಕರ ಗುಡಿಸಲಿಗೆ ಬೆಂಕಿ ಬಿದ್ದ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 19:38 IST
Last Updated 16 ಜುಲೈ 2022, 19:38 IST

ಬೆಂಗಳೂರು: ‘ಕಾಚರಕನಹಳ್ಳಿ ಕೊಳೆಗೇರಿ ಪ್ರದೇಶದಲ್ಲಿನ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಬಿದ್ದ ಪ್ರಕರಣ
ದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 6 ಎಕರೆ ಜಾಗವನ್ನು ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ವಕೀಲೆ ವೈಶಾಲಿ ಹೆಗಡೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಬಿ.ವಿ. ವಿದ್ಯುಲ್ಲತಾ, ‘ಈ ಪ್ರಕರಣದಲ್ಲಿ 200 ಕುಟುಂಬಗಳಿಗೆ ಆಶ್ರಯ ಇಲ್ಲದಂತಾಗಿದೆ. ಅವರ ಪುನರ್ವಸತಿಗೆ ಪರ್ಯಾಯ ಜಾಗ ಒದಗಿಸುವ ಸಂಬಂಧ ಸರ್ಕಾರ ನಿಲುವು ಏನು ಎಂಬುದು ಇನ್ನೂ ಗೊತ್ತಾಗಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ‘ನಿರಾಶ್ರಿತರಿಗಾಗಿಯೇ 6 ಎಕರೆ ಜಾಗವನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಲಾಗಿದೆ’ ಎಂದು ಮಾಹಿತಿ ನೀಡಿದರು. ‘ಸರ್ಕಾರ ಹಸ್ತಾಂತರಿಸಿದ ಜಾಗ ಸ್ವಾಧೀನಕ್ಕೆ ಬಂದ ತಕ್ಷಣವೇ ಪುನರ್ವಸತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.