
ಬೆಂಗಳೂರು: ‘ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಪಾಲಿಸಿದರೆ ಮಾತ್ರ ಖಾಸಗಿ ಹವಾನಿಯಂತ್ರಿತ ಸ್ಲೀಪರ್ ಕೋಚ್ ಹಾಗೂ ಪ್ರವಾಸಿ ಬಸ್‌ಗಳಿಗೆ ವಾಹನ ಸಾಮರ್ಥ್ಯ ಪ್ರಮಾಣಪತ್ರ ನೀಡಲಾಗುತ್ತದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಚೇರಿ ಆವರಣದಲ್ಲಿ ಜೀರ್ಣೋದ್ಧಾರಗೊಂಡ ಏಳು ಸುತ್ತಿನಕೋಟೆ ಸಪ್ತಮಾತೃಕೆಯರ ಆದಿಶಕ್ತಿ ದೇವಸ್ಥಾನವನ್ನು ಗುರುವಾರ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಕೋಚ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ರಾಜ್ಯದಾದ್ಯಂತ ಸಂಚರಿಸುವ ಎಲ್ಲ ಸ್ಲೀಪರ್ ಕೋಚ್ ಹಾಗೂ ಪ್ರವಾಸಿ ಬಸ್‌ಗಳು ಕಡ್ಡಾಯವಾಗಿ ಸುರಕ್ಷತಾ ಮಾನದಂಡಗಳನ್ನು ಅನುಸರಿಸಬೇಕು’ ಎಂದು ಹೇಳಿದರು.
‘ಬೆಂಗಳೂರು ಸೇರಿದಂತೆ ಹಲವು ಕಡೆ ಎಸಿ ಸ್ಲೀಪರ್ ಕೋಚ್ ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ಅನೇಕ ಜೀವಗಳು ಅಪಾಯಕ್ಕೆ ಸಿಲುಕುತ್ತಿವೆ. ಹೀಗಾಗಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳು ಪ್ರಯಾಣಿಕರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿವೆ. ಅದರಂತೆ ಮಾನದಂಡಗಳನ್ನು ರಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಸ್‌ಗಳ ವಿನ್ಯಾಸ, ನಿರ್ಮಾಣ ವಿಧಾನ ಹಾಗೂ ಸುರಕ್ಷತಾ ಸೌಲಭ್ಯಗಳ ಕುರಿತು ವಿವರವಾಗಿ ಚರ್ಚಿಸಲಾಗಿದೆ. ಅದರಂತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂಬ ಆದೇಶ ಹೊರಡಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.