ADVERTISEMENT

ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರಕ್ಕೆ ಆಗ್ರಹ

ಬಹುಜನ ಸಮಾಜ ಪಕ್ಷದ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 19:38 IST
Last Updated 27 ಏಪ್ರಿಲ್ 2022, 19:38 IST
ಬಿಎಸ್‌ಪಿ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಬಿಎಸ್‌ಪಿ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಉತ್ತರಹಳ್ಳಿಯ ಭುವನೇಶ್ವರಿನಗರದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿ ನಿರ್ಮಿಸಿರುವ ಮನೆಗಳಲ್ಲಿ ವಾಸವಿದ್ದ 430 ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು. ಅವರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಶಾಸಕ ಎಂ.ಕೃಷ್ಣಪ್ಪ ಹಾಗೂ ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಬೆಂಗಳೂರು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಬಡವರ ವಸತಿ ಲಪಟಾಯಿಸುತ್ತಿರುವ ವಿ.ಸೋಮಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ವಸತಿ ಯೋಜನೆಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಬಿಡುಗಡೆಯಾಗಿರುವ ಅನುದಾನದ ದುರ್ಬಳಕೆಯಾಗಿದೆ. ವಸತಿ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ADVERTISEMENT

‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಅಡಿ ಮೀಸಲಿಟ್ಟ ಅನುದಾನಲ್ಲಿ 1,110 ಮನೆಗಳನ್ನು ನಿರ್ಮಿಸಿ ಅವುಗಳನ್ನು ಪರಿಶಿಷ್ಟ ಜಾತಿಯ ಪೌರಕಾರ್ಮಿ
ಕರಿಗೆ ಬಿಬಿಎಂಪಿ ವತಿಯಿಂದ ಹಂಚಿಕೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಸತಿ ಸಚಿವ ವಿ.ಸೋಮಣ್ಣ ಹಾಗೂ ಯಲಹಂಕ ಶಾಸಕ ಎಸ್‌.ಆರ್.ವಿಶ್ವನಾಥ್‌ ತಮ್ಮ ಪ್ರಭಾವ ಬಳಸಿ ಈ ಯೋಜನೆ ರದ್ದುಗೊಳಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಇಟ್ಟಮಡುವಿನಲ್ಲಿ ಮೀಸಲಿಟ್ಟಿರುವ ಜಾಗದಲ್ಲಿ ಅಂಬೇಡ್ಕರ್‌ ಭವನ ನಿರ್ಮಿಸಬೇಕು. ಗಂಗೊಂಡನಹಳ್ಳಿಯ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಪದ್ಮನಾಭನಗರ ಕ್ಷೇತ್ರದ ಮಾರುತಿನಗರ, ಭವಾನಿನಗರ, ಎಸ್‌.ಕೆ.ಗಾರ್ಡನ್‌, ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ನೆಲೆಸಿರುವ ಬಡವರಿಗೆ ಹಕ್ಕುಪತ್ರ ವಿತರಿಸಬೇಕು. ನಿರ್ಗತಿಕರಿಗೆ ಸ್ವಂತ ಸೂರು ಕಲ್ಪಿಸಬೇಕು. ಜೈ ಭುವನೇಶ್ವರಿ ನಗರದಲ್ಲಿ ನಿರ್ಮಿಸಿರುವ ಮೇಲ್ಸೇತುವೆಗೆ ‘ಡಾ.ಭೀಮರಾವ್‌ ಅಂಬೇಡ್ಕರ್‌ ಸೇತುವೆ’ ಎಂದು ನಾಮಕರಣ ಮಾಡಬೇಕು. ಕೂಲಿ ನಗರ ಸೇತುವೆ ಬಳಿ ಡಾ.ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿ ನಿರ್ಮಾಣಕ್ಕೆ ಜಾಗ ಕಲ್ಪಿಸಬೇಕು’ ಎಂದೂ ಪ್ರತಿಭಟನ
ಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.