ADVERTISEMENT

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ವಾಗ್ವಾದ ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 8:51 IST
Last Updated 6 ಏಪ್ರಿಲ್ 2022, 8:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗೆಳೆಯನ ಜನ್ಮದಿನಾಚರಣೆಯಲ್ಲಿ ಭಾಗಿಯಾಗಿದ್ದ ಚಂದ್ರು

ಬೆಂಗಳೂರು:ಜಗಜೀವನರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ್ (19) ಎಂಬುವರ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಗೆ ಮುಂದುವರಿಸಿದ್ದು,ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.

'ಮೃತ ಚಂದ್ರು ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡುತ್ತಿದ್ದ. ಆತ ಗೆಳೆಯ ಸೈಮನ್‌ನ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದ' ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ADVERTISEMENT

'ಬುಧವಾರ ಬೆಳಿಗ್ಗೆ 2 ಗಂಟೆ ಸುಮಾರಿಗೆ ಜೆ.ಜೆ.ನಗರ ಠಾಣೆ ವ್ಯಾಪ್ತಿಯ ಹಳೆ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಕಬಾಬ್ ಸೆಂಟರ್‌ವೊಂದರ ಬಳಿ ಚಂದ್ರು ಹಾಗೂ ಆರೋಪಿಗಳ ನಡುವೆ ಜಗಳ ಶುರುವಾಗಿದೆ. ಈ ವೇಳೆ ಆರೋಪಿಗಳ ಪೈಕಿ ಒಬ್ಬ ಚಾಕುವಿನಿಂದ ಚಂದ್ರು ತೊಡೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ' ಎಂದು ಮಾಹಿತಿ ನೀಡಿದ್ದಾರೆ.

'ಕಬಾಬ್ ಸೆಂಟರ್‌ಗಾಗಿ ಹುಡುಕಾಟ ನಡೆಸುತ್ತಿರುವಾಗ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ನಂತರ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಅದು ಕೊಲೆಯಲ್ಲಿ ಅಂತ್ಯವಾಗಿದೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.