ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ: ದಂಡ ಮೊತ್ತ ಹೆಚ್ಚಳಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 28 ಮೇ 2019, 20:08 IST
Last Updated 28 ಮೇ 2019, 20:08 IST
   

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ವಿಧಿಸುತ್ತಿರುವ ದಂಡದ ಮೊತ್ತವನ್ನು ₹200ರಿಂದ ₹2 ಸಾವಿರಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದೆ ಎಂದು ನಗರ ಜಿಲ್ಲಾ ಕ್ಷಯರೋಗ ಮತ್ತು ತಂಬಾಕು ನಿಯಂತ್ರಣಾಧಿಕಾರಿ ಡಾ.ಜಿ.ಎ. ಶ್ರೀನಿವಾಸ್ ಹೇಳಿದರು.

ನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಹಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಹಾಗೂ ವಾಣಿಜ್ಯ ಮತ್ತು ವ್ಯಾಪಾರ, ಉತ್ಪಾದನೆ, ಪೂರೈಕೆ ಮತ್ತು ವಿತರಣೆ) ನಿಯಂತ್ರಣಾ ಕಾಯ್ಡೆ-2003 ಕ್ಕೆ ತಿದ್ದುಪಡಿ ತರಲು ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದಕ್ಕೆ ಕಡಿವಾಣ ಹಾಕಲು ಪೂರಕ ವಾತಾವರಣ ಸೃಷ್ಟಿಸುವ ಈ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದರು.

ADVERTISEMENT

ವಿಶ್ವ ತಂಬಾಕು ರಹಿತ ದಿನವಾದ ಮೇ 31 ರಂದು ಜಿಲ್ಲಾ ವ್ಯಾಪ್ತಿಯ ನಾಲ್ಕು ತಾಲ್ಲೂಕು ಆಸ್ಪತ್ರೆಗಳಲ್ಲಿ, ಎಲ್ಲಾ ಎಂಟು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಧೂಮಪಾನ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ವಿದ್ಯಾರ್ಥಿಗಳು ಜಾಥಾ ನಡೆಸಲಿದ್ದಾರೆ. ಧೂಮಪಾನ ಮಾಡುವವರಿಗೆ ಗುಲಾಬಿ ಹೂವು ನೀಡಿ ಧೂಮಪಾನದಿಂದ ದೂರವಿರಿ ಎಂಬ ಸಂದೇಶ ಸಾರಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.