ಬೆಂಗಳೂರು: ‘ಇತ್ತೀಚೆಗೆ ಖಿನ್ನತೆಯಂತಹ ಮಾನಸಿಕ ಅನಾರೋಗ್ಯ ಸಮಸ್ಯೆಗೆ ಒಳಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಹೊರಬರಲು ಸಾಮಾಜಿಕ ಒಡನಾಟ ಅಗತ್ಯ’ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಹೇಳಿದರು.
ನಿಮ್ಹಾನ್ಸ್ ಮತ್ತು ತೋಟಕಾರಿಕೆ ಇಲಾಖೆ ಜಂಟಿಯಾಗಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಮುದಾಯ ಸಂಪರ್ಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
‘ಒಂಟಿತನದಿಂದಾಗಿ ಯುವಜನರಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಮೊಬೈಲ್‌ನಂತಹ ಡಿಜಿಟಲ್ ಸಾಧನಗಳು ಮತ್ತು ಸಾಮಾಜಿಕ ಜಾಲತಾಣಗಳ ಗೀಳಿನಿಂದ ಏಕಾಗ್ರತೆ ಮತ್ತು ಕಲಿಕಾ ಸಾಮರ್ಥ್ಯ ಕುಸಿಯುತ್ತಿದೆ. ಹೀಗಾಗಿ, ಸ್ನೇಹಿತರು ಮತ್ತು ಪ್ರಕೃತಿಯೊಂದಿಗೆ ಸಮಯ ಕಳೆಯಬೇಕು. ಪ್ರತಿನಿತ್ಯ ಯೋಗ ಮತ್ತು ಧ್ಯಾನವನ್ನು ರೂಢಿಸಿಕೊಳ್ಳಬೇಕು. ಅಲ್ಲದೆ, ಉತ್ತಮ ನಿದ್ದೆಯೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ’ ಎಂದು ಅಭಿಪ್ರಾಯಪಟ್ಟರು.
‘ಉದ್ಯೋಗಸ್ಥರು ಕೆಲಸದ ನಡುವೆ ವಿರಾಮ ಪಡೆಯಬೇಕು. ದೂಷಣೆ ಮತ್ತು ಆರೋಪಗಳು ಸಾರ್ವತ್ರಿಕ ಸಮಸ್ಯೆಗಳಾಗಿದ್ದು, ಇವುಗಳಿಗೆ ಕುಗ್ಗಬಾರದು. ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುಂದೆ ಸಾಗಬೇಕು’ ಎಂದರು.
ವಿದ್ಯಾರ್ಥಿಯೊಬ್ಬರು ‘ಕೋವಿಡ್ ನಂತರ ಮಾನಸಿಕ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಿವೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ’ಈ ಬಗ್ಗೆ ಯಾವುದೇ ವೈಜ್ಞಾನಿಕ ವರದಿಗಳಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.