ADVERTISEMENT

ತ್ವರಿತವಾಗಿ ಸಮೀಕ್ಷೆ ಪ್ರಾರಂಭಿಸಿ:ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಸೂಚನೆ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 23:33 IST
Last Updated 24 ಸೆಪ್ಟೆಂಬರ್ 2025, 23:33 IST
ಜಿಬಿಎ
ಜಿಬಿಎ   

ಬೆಂಗಳೂರು: ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತ್ವರಿತವಾಗಿ ಪ್ರಾರಂಭಿಸಬೇಕು’ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಬುಧವಾರ ನಡೆದ ವರ್ಚ್ಯುವಲ್ ಸಭೆಯಲ್ಲಿ ಅವರು ಮಾತನಾಡಿದರು. 

‘ಸಮೀಕ್ಷೆ ನಡೆಸಲು ವಿವಿಧ ಇಲಾಖೆಗಳಿಂದ ನಿಯೋಜಿಸಿರುವ ಸಮೀಕ್ಷಾದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಬೇಕು. ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಸಮೀಕ್ಷಾ ಕಾರ್ಯವನ್ನು ನಡೆಸಬೇಕು. ಆಶಾ ಕಾರ್ಯಕರ್ತೆಯರನ್ನು ಈ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಬಗ್ಗೆ ಅವರಿಗೆ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ADVERTISEMENT

‘ಸಮೀಕ್ಷೆಯ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ನಗರ ಪಾಲಿಕೆಗಳ ಆಯುಕ್ತರು ತರಬೇತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.  

‘ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಸಮೀಕ್ಷೆಯ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸಬೇಕು. ಅದಕ್ಕೆ ಬೇಕಾದಂತಹ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಿಬಿಎ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು’ ಎಂದರು.  

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ‘ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಮೀಕ್ಷೆಗಾಗಿ ಜಿಪಿಎಸ್ ಆಧಾರಿತ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಮನೆ-ಮನೆಗೆ ಅಂಟಿಸುವ ಸ್ಟಿಕ್ಕರ್‌ಗಳಲ್ಲಿ ಯುಎಚ್‌ಐಡಿ ಸಂಖ್ಯೆಯನ್ನು ನೀಡಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.