ADVERTISEMENT

ಎಸ್‌ಸಿಎಸ್‌ಪಿ– ಟಿಎಸ್‌ಪಿ ಕಾಯ್ದೆ ತಿದ್ದುಪಡಿ ಭರವಸೆ: ಎಂ.ಪಿ.ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 20:13 IST
Last Updated 2 ಮಾರ್ಚ್ 2022, 20:13 IST
ಎಂ.ಪಿ.ಕುಮಾರಸ್ವಾಮಿ
ಎಂ.ಪಿ.ಕುಮಾರಸ್ವಾಮಿ   

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸದಂತೆ ತಡೆಯಲು ಕಾಯ್ದೆಗೆ ಅಗತ್ಯ ತಿದ್ದುಪಡಿ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ವಿಧಾನ ಮಂಡಲದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.

‘ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದೆ’ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಕಾಯ್ದೆಗೆ ಮತ್ತೆ ತಿದ್ದುಪಡಿ ತರುವ ಅಗತ್ಯ ಕುರಿತು ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿದ್ದೇನೆ’ ಎಂದರು.

‘ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಸೆಕ್ಷನ್‌ 7–ಡಿಗೆ ತಿದ್ದುಪಡಿ ತಂದ ಬಳಿಕ ಅನ್ಯ ಉದ್ದೇಶಕ್ಕೆ ಹಣ ಬಳಸಲು ಅವಕಾಶ ದೊರಕಿದೆ. ಅಧಿಕಾರಿಗಳು ಈ ಅವಕಾಶವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ರಸ್ತೆ, ಸೇತುವೆ ನಿರ್ಮಾಣಕ್ಕೆ ಬಳಸಲಾಗುತ್ತಿದೆ. ಇದರಿಂದ ಈ ಸಮುದಾಯದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಶೈಕ್ಷಣಿಕ ಚಟುವಟಿಕೆಗೆ ನೆರವು ನೀಡುವುದಕ್ಕೂ ಹಣದ ಕೊರತೆ ಉಂಟಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.