ADVERTISEMENT

ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ಪ್ರಶ್ನಿಸಿ ಮುಖ್ಯಮಂತ್ರಿಗೆ ಪತ್ರ

‌ಇಂಡಿಯನ್‌ ಪೊಲೀಸ್ ಫೌಂಡೇಶನ್‌ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 16:04 IST
Last Updated 9 ಜೂನ್ 2025, 16:04 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಸೇರಿ ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಿರುವ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್‌ ಪೊಲೀಸ್ ಫೌಂಡೇಷನ್‌ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮಹಾದುರಂತಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ, ಹೆಚ್ಚುವರಿ ಪೊಲೀಸ್‌ ಕಮಿಷನರ್ ವಿಕಾಸ್‌ ಕುಮಾರ್‌ ವಿಕಾಸ್‌, ಕೇಂದ್ರ ವಿಭಾಗದ ಡಿಸಿಪಿ ಶೇಖರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್ ಗಿರೀಶ್‌ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಅಮಾನತು ಆದೇಶವನ್ನು ರದ್ದು ಪಡಿಸಬೇಕು ಎಂದು ನಿವೃತ್ತ ಅಧಿಕಾರಿಗಳು ಪತ್ರದಲ್ಲಿ ಕೋರಿದ್ದಾರೆ.

ADVERTISEMENT

‘ವಿಜಯೋತ್ಸವಕ್ಕೆ ಪೂರ್ವ ತಯಾರಿ ಮಾಡಿಕೊಳ್ಳದೇ ಸಾಮಾಜಿಕ ಮಾಧ್ಯಮಗಳಲ್ಲಿ ಉಚಿತವಾಗಿ ಟಿಕೆಟ್‌ ನೀಡುವುದಾಗಿ ಮಾಹಿತಿ ನೀಡಲಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಆರಂಭದಲ್ಲೇ ಭದ್ರತೆಯ ಆತಂಕ ವ್ಯಕ್ತಪಡಿಸಿ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ನಿರೀಕ್ಷೆಗೂ ಮೀರಿ ಜನರು ಬಂದಿದ್ದರಿಂದ ಬಂದೋಬಸ್ತ್‌ ಕಲ್ಪಿಸುವುದೂ ಪೊಲೀಸರಿಗೆ ಕಷ್ಟವಾಗಿತ್ತು. ಹೀಗಾಗಿ ಪೊಲೀಸರ ಅಮಾನತು ಕ್ರಮದ ಆದೇಶವನ್ನು ವಾಪಸ್‌ ಪಡೆದುಕೊಳ್ಳಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.

‘ಪ್ರಕರಣದ ಸಂಬಂಧ ತನಿಖೆ ನಡೆಸಲು ಸರ್ಕಾರ ಆದೇಶ ಮಾಡಿದೆ. ಅದನ್ನು ಸ್ವಾಗತ ಮಾಡುತ್ತೇವೆ. ಆದರೆ, ತನಿಖಾ ವರದಿಗೂ ಮುನ್ನವೇ ಪೊಲೀಸ್‌ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿ ಅಮಾನತು ಮಾಡಲಾಗಿದೆ. ಇದು ತಪ್ಪು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.