ADVERTISEMENT

ತಿಂಗಳ ಒಳಗೇ ಸಂಪುಟ ವಿಸ್ತರಣೆ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2018, 4:05 IST
Last Updated 15 ನವೆಂಬರ್ 2018, 4:05 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಬೆಂಗಳೂರು: ‘ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಪಕ್ಷದ ವರಿಷ್ಠ ನಾಯಕರು ಪ್ರವಾಸದಲ್ಲಿದ್ದಾರೆ. ಜೆಡಿಎಸ್‌ ವರಿಷ್ಠ ದೇವೇಗೌಡ ಅವರೂ ಬೆಂಗಳೂರಿನಲ್ಲಿ ಇಲ್ಲ. ಎಲ್ಲರೂ ಕುಳಿತು ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಸಂಪುಟದಲ್ಲಿರುವ ಒಟ್ಟು 34 ಸ್ಥಾನಗಳ ಪೈಕಿ ಕಾಂಗ್ರೆಸ್‌ 22, ಜೆಡಿಎಸ್‌ 12 ಸ್ಥಾನಗಳನ್ನು ಹಂಚಿಕೊಂಡಿವೆ. ಕಾಂಗ್ರೆಸ್‌ನ ಆರು ಮತ್ತು ಜೆಡಿಎಸ್‌ನ ಎರಡು ಸ್ಥಾನಗಳನ್ನು ಭರ್ತಿ ಮಾಡಬೇಕಿದೆ.

ADVERTISEMENT

ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳ ನೇಮಕ ಮಾಡುವಂತೆ ಕಾಂಗ್ರೆಸ್‌ನಲ್ಲಿ ಒತ್ತಡ ಹೆಚ್ಚುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ತೀವ್ರ ಲಾಬಿ ನಡೆಸುತ್ತಿದ್ದಾರೆ.

ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ, ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಈ ಕಾರಣ ಮುಂದಿಟ್ಟು ಸಂಪುಟ ವಿಸ್ತರಣೆ ಮುಂದೂಡಲು ಉಭಯ ಪಕ್ಷಗಳು ಚಿಂತನೆ ನಡೆಸಿವೆ ಎಂಬ ಮಾತೂ ಕೇಳಿಬಂದಿದೆ.

ನವೆಂಬರ್‌ ತಿಂಗಳ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆ ಆಗಬಹುದು ಎಂಬ ನಿರೀಕ್ಷೆ ಇದೆ. ಆದರೆ, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್‌ ವರಿಷ್ಠರು ಬ್ಯುಜಿಯಾಗಿದ್ದಾರೆ. ಹೀಗಾಗಿ, ಸದ್ಯ ದೆಹಲಿಗೆ ಬರುವುದು ಬೇಡ ಎಂದು ರಾಜ್ಯ ನಾಯಕರಿಗೆ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.