ADVERTISEMENT

ಮೀಸಲಾತಿ: ಸರ್ಕಾರದ ಅಪ್ರಾಮಾಣಿಕತೆಗೆ ಸಾಕ್ಷಿ: ಆರ್‌. ವೆಂಕಟರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 7:02 IST
Last Updated 26 ಮಾರ್ಚ್ 2023, 7:02 IST

ಬೆಂಗಳೂರು: ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರವು ಈ ವಿಚಾರದಲ್ಲಿ ಸರ್ಕಾರವು ಹೊಂದಿರುವ ಅಪ್ರಾಮಾಣಿಕತೆಗೆ ಸಾಕ್ಷಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್‌. ವೆಂಕಟರಾಮಯ್ಯ ಟೀಕಿಸಿದ್ದಾರೆ.

ಮೀಸಲಾತಿ ಪ್ರಮಾಣ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರದ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಒಕ್ಕಲಿಗರು ಮತ್ತು ಲಿಂಗಾಯತರ ಮೀಸಲಾತಿ ಹೆಚ್ಚಳದ ಬೇಡಿಕೆಗಳ ಕುರಿತು ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಸಮುದಾಯಗಳ ಹಿಂದುಳಿದಿರುವಿಕೆಯನ್ನು ಗುರುತಿಸಲು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಅಧ್ಯಯನ ಅಗತ್ಯ ಎಂದು ಆಯೋಗ ತಿಳಿಸಿದ್ದರೂ ಸರ್ಕಾರ ಯಾವ ಆಧಾರದಲ್ಲಿ ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಂಡಿದೆ’ ಎಂದಿದ್ದಾರೆ.

ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಪಟ್ಟಿಯಲ್ಲಿರುವ ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದಲೂ ಇದೆ. ಈ ಸಮುದಾಯಗಳ ಬೇಡಿಕೆ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದ ಸರ್ಕಾರ, ಪ್ರವರ್ಗ-1 ಮತ್ತು ಪ್ರವರ್ಗ-2ಎ ಪಟ್ಟಿಯಲ್ಲಿರುವ ಜಾತಿಗಳ ಜನರಿಗೆ ಅನ್ಯಾಯ ಮಾಡಿದೆ. ಸಾಮಾಜಿಕ ನ್ಯಾಯದ ಪರ ಇರುವುದಾಗಿ ಹೇಳಿಕೊಳ್ಳುವ ಸರ್ಕಾರ, ಅದಕ್ಕೆ ತಕ್ಕಂತೆ ನಡೆದುಕೊಳ್ಳದೆ ಅಪ್ರಾಮಾಣಿಕತೆ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.

ADVERTISEMENT

ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕವಾಗಿ ಅಧ್ಯಯನ ನಡೆಸಿದ ಆಧಾರದಲ್ಲಿ ಮೀಸಲಾತಿ ನಿಗದಿಪಡಿಸಬೇಕು. ಪ್ರತೀ ಹತ್ತು ವರ್ಷಗಳಿಗೊಮ್ಮೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಎಲ್ಲ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಿಂದುಳಿದಿರುವಿಕೆಯ ಕುರಿತು ಅಧ್ಯಯನ ನಡೆಸಬೇಕು. ಅದರ ಆಧಾರದಲ್ಲಿ ಪಟ್ಟಿಯನ್ನು ಪರಿಷ್ಕರಿಸಬೇಕು ಎಂಬುದನ್ನು ಸಂವಿಧಾನವೇ ಹೇಳುತ್ತದೆ. ಆದರೆ, ರಾಜ್ಯದಲ್ಲಿ 2002ರ ಬಳಿಕ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದು ಪಟ್ಟಿ ಪರಿಷ್ಕರಣೆಯನ್ನೇ ಮಾಡಿಲ್ಲ ಎಂದಿದ್ದಾರೆ.

ನಿಜವಾಗಿಯೂ ಹಿಂದುಳಿದಿರುವ ಸಮುದಾಯಗಳ ಕೂಗಿಗೆ ಮಣಿಯ ಬೇಕಾದ ಸರ್ಕಾರ, ಪ್ರಬಲ ಸಮುದಾಯಗಳನ್ನು ಓಲೈಸುತ್ತಿದೆ. ಪ್ರಬಲರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲು ಸರ್ಕಾರದ ಈ ತೀರ್ಮಾನ ದಾರಿ ಮಾಡಿಕೊಡುತ್ತಿದೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.