ADVERTISEMENT

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಕೇಂದ್ರ ಸಚಿವ ರಾಮದಾಸ್ ಅಠವಳೆ

ಆರ್‌ಪಿಐ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದಲ್ಲಿ ಕೇಂದ್ರ ಸಚಿವ ರಾಮದಾಸ್ ಅಠವಳೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 16:04 IST
Last Updated 17 ಫೆಬ್ರುವರಿ 2024, 16:04 IST
<div class="paragraphs"><p>ಆರ್‌ಪಿಐ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದಲ್ಲಿ ಸಂವಿಧಾನದ ಪೀಠಿಕೆ ಬೋಧಿಸಲಾಯಿತು. ಕೇಂದ್ರ ಸಚಿವ ರಾಮದಾಸ್ ಅಠವಳೆ, ಆರ್‌ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ , ರಾಜ್ಯ ಕಾರ್ಯಾಧ್ಯಕ್ಷ ಜಿ ಗೋವಿಂದಯ್ಯ ಭಾಗವಹಿಸಿದ್ದರು ಪ್ರಜಾವಾಣಿ ಚಿತ್ರ</p></div>

ಆರ್‌ಪಿಐ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದಲ್ಲಿ ಸಂವಿಧಾನದ ಪೀಠಿಕೆ ಬೋಧಿಸಲಾಯಿತು. ಕೇಂದ್ರ ಸಚಿವ ರಾಮದಾಸ್ ಅಠವಳೆ, ಆರ್‌ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ , ರಾಜ್ಯ ಕಾರ್ಯಾಧ್ಯಕ್ಷ ಜಿ ಗೋವಿಂದಯ್ಯ ಭಾಗವಹಿಸಿದ್ದರು ಪ್ರಜಾವಾಣಿ ಚಿತ್ರ

   

ಬೆಂಗಳೂರು: ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಎಂಬ ವಿರೋಧ ಪಕ್ಷಗಳ ಮೈತ್ರಿಕೂಟದ ನೇತೃತ್ವ ವಹಿಸಿರುವ ಕಾಂಗ್ರೆಸ್‌ ಪಕ್ಷದ ಎಲ್ಲ ಅಭ್ಯರ್ಥಿಗಳನ್ನು ಸೋಲಿಸಿ, ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ್ ಅಠವಳೆ ಕರೆ ನೀಡಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಶನಿವಾರ ಆಯೋಜಿಸಿದ್ದ ‘ಆರ್‌ಪಿಐ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

‘ಇಂಡಿಯಾ ಎಂಬ ಮೂರ್ಖರ ಗುಂಪಿನಿಂದ ಈಗಾಗಲೇ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೊರನಡೆದಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿವೆ. ಕಾಂಗ್ರೆಸ್ ಈಗ ಕೇವಲ ಪ್ರಾದೇಶಿಕ ಪಕ್ಷವಾಗಿ ಮಾತ್ರ ಉಳಿದಿದೆ’ ಎಂದು ಹೇಳಿದರು.

ಆರ್‌ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ, ‘ರಾಜ್ಯದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳು ಕೋಲಾರ ಲೋಕಸಭೆ ಕ್ಷೇತ್ರವನ್ನು ಆರ್‌ಪಿಐ ಅಭ್ಯರ್ಥಿಗೆ ಬಿಟ್ಟುಕೊಡಬೇಕು. ಡಾ.ಬಿ.ಆರ್. ಅಂಬೇಡ್ಕರ್‌ ಅವರು ರಾಜ್ಯದಲ್ಲಿ ನಡೆದಾಡಿರುವ 10 ಸ್ಥಳಗಳಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸಲು ₹10 ಕೋಟಿ ಅನುದಾನ ನೀಡಬೇಕು. ಪಿಟಿಸಿಎಲ್ ಕಾಯ್ದೆಯನ್ನು ಸಮಗ್ರವಾಗಿ ತಿದ್ದುಪಡಿ ಮಾಡಿ ಜಾರಿಗೊಳಿಸಬೇಕು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 12 ಸಾವಿರ ಗ್ರಾಮ ಸಹಾಯಕರನ್ನು ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು.

ಆರ್‌ಪಿಐ ರಾಜ್ಯ ಘಟಕದ ಅಧ್ಯಕ್ಷ ಸತೀಶ್, ಪ್ರಧಾನ ಕಾರ್ಯದರ್ಶಿ ಬಿ.ಸಿ. ವೆಂಕಟರಮಣಪ್ಪ, ಎ.ಬಿ. ಹೊಸಮನಿ, ಜಿ. ಗೋವಿಂದಯ್ಯ, ಅಶ್ವತ್ಥಾಮ, ಚಿತ್ರದುರ್ಗದ ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.