ADVERTISEMENT

ಭೂಸ್ವಾಧೀನ ರದ್ದು: ತಡೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2019, 19:25 IST
Last Updated 28 ಫೆಬ್ರುವರಿ 2019, 19:25 IST

ಬೆಂಗಳೂರು: ಬನಶಂಕರಿ ಐದನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಪಡಿಸಿಕೊಂಡಿದ್ದ ಕ್ರಮವನ್ನು ರದ್ದುಗೊಳಿಸಿ 2016ರಲ್ಲಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶಕ್ಕೆ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಮದ್ಯಂತರ ತಡೆ ನೀಡಿದೆ.

ಈ ಕುರಿತಂತೆ ಬೆಂಗಳೂರು ಅಭಿ ವೃದ್ಧಿ ಪ್ರಾಧಿಕಾರ (ಬಿಡಿಎ) ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಡಿಎ ಪರ ವಾದ ಮಂಡಿಸಿದ ವಕೀಲ ಬಿ.ಎಸ್.ಸಚಿನ್, ‘ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ನಂತರ ಐದು ವರ್ಷಗಳಲ್ಲಿ ಬಡಾವಣೆ ನಿರ್ಮಾಣ ಯೋಜನೆ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಏಕಸದಸ್ಯ ನ್ಯಾಯಪೀಠ ಭೂ ಸ್ವಾಧೀನ ರದ್ದುಗೊಳಿಸಿದೆ. ಆದರೆ, ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವ್ಯಾಜ್ಯಗಳು ಇತ್ಯರ್ಥವಾಗದ ಕಾರಣ ಯೋಜನೆ ಪೂರ್ಣಗೊಳಿಸಲಾಗಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿದೆ.

ಉತ್ತರಹಳ್ಳಿ ಸುತ್ತಮುತ್ತ ಬನಶಂಕರಿ ಐದನೇ ಹಂತದ ನಿರ್ಮಾಣಕ್ಕೆ 1989ರ ಏಪ್ರಿಲ್‌ 13ರಂದು ಬಿಡಿಎ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ನಂತರ 1999ರ ಅಕ್ಟೋಬರ್ 7ರಂದು ಅಂತಿಮ ಅಧಿಸೂಚನೆ ಹೊರಡಿಸಿತ್ತು. ಏಕಸದಸ್ಯ ನ್ಯಾಯಪೀಠ ಈ ಅಂತಿಮ ಅಧಿಸೂಚನೆಯನ್ನು ರದ್ದುಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.