ADVERTISEMENT

ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 14:33 IST
Last Updated 24 ಜನವರಿ 2024, 14:33 IST
ಕಾರ್ಯಕ್ರಮದಲ್ಲಿ ದಿನೇಶ್ ಗುಂಡೂರಾವ್ ಅವರು ಗುಲಾಬಿ ಬಣ್ಣದ ಬಲೂನುಗಳನ್ನು ತೇಲಿ ಬಿಟ್ಟರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ದಿನೇಶ್ ಗುಂಡೂರಾವ್ ಅವರು ಗುಲಾಬಿ ಬಣ್ಣದ ಬಲೂನುಗಳನ್ನು ತೇಲಿ ಬಿಟ್ಟರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಪಾಲ್ಗೊಂಡಿದ್ದರು.   

ಬೆಂಗಳೂರು: ‘ಹೆಣ್ಣು ಭ್ರೂಣ ಹತ್ಯೆ ತಡೆಗೆ ಆರೋಗ್ಯ ಇಲಾಖೆಯು ಈಗಾಗಲೇ ಕಾರ್ಯಪಡೆಗಳನ್ನು ರಚಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿಯಾದ ಕ್ರಮಗಳನ್ನು ಜಾರಿಗೊಳಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ಇಲಾಖೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. 

‘ರಾಜ್ಯದಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಇವತ್ತಿನ ಕಾಲಘಟ್ಟದಲ್ಲೂ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಾವು ಜಾಗೃತಿ ಮೂಡಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸ. ಹೆಣ್ಣು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಹೇಳಿದರು.

ADVERTISEMENT

‘ಭ್ರೂಣ ಹತ್ಯೆಗಳನ್ನು ತಡೆಯಲು ಈಗಾಗಲೇ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಕಾರ್ಯಾಚರಣೆಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು. ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗಳ ಮೇಲೆಯೂ ದಾಳಿ ನಡೆಸಲಾಗುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್, ಆಯುಕ್ತ ಡಿ. ರಂದೀಪ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.