ADVERTISEMENT

ಬೆಂಗಳೂರು: ಮರದ ಕಂಬ ಬಿದ್ದು ವಿದ್ಯಾರ್ಥಿನಿ ಸಾವು

ಕಟ್ಟಡದ ಮಾಲೀಕರ ವಿರುದ್ಧ ವಿ.ವಿ ಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 4 ಜನವರಿ 2025, 23:30 IST
Last Updated 4 ಜನವರಿ 2025, 23:30 IST
ತೇಜಸ್ವಿನಿ 
ತೇಜಸ್ವಿನಿ    

ಬೆಂಗಳೂರು: ಬಸವನಗುಡಿ ನ್ಯಾಷನಲ್‌ ಕಾಲೇಜು ಬಳಿ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್‌ಗೆ ಬಳಸಿದ್ದ ಮರದ ಕಂಬ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ತೇಜಸ್ವಿನಿ(15) ಮೃತ ವಿದ್ಯಾರ್ಥಿನಿ. ಘಟನೆ ಸಂಬಂಧ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಕಟ್ಟಡದ ಮಾಲೀಕರ ವಿರುದ್ಧ ವಿ.ವಿ ಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ತೇಜಸ್ವಿನಿ, ವಾಸವಿ ವಿದ್ಯಾನಿಕೇತನ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಶನಿವಾರ ಮಧ್ಯಾಹ್ನ ಶಾಲೆ ಮುಗಿಸಿ, ನಡೆದು ಮನೆಯತ್ತ ತೆರಳುತ್ತಿದ್ದಳು. ಆಗ ಮರದ ಕಂಬ ವಿದ್ಯಾರ್ಥಿನಿಯ ತಲೆಯ ಮೇಲೆ ಬಿದ್ದಿದೆ. ಸ್ಥಳದಲ್ಲಿದ್ದವರು ವಿದ್ಯಾರ್ಥಿನಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ವಿ.ವಿ ಪುರ ಠಾಣೆಯ ಸಮೀಪವೇ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ನಾಲ್ಕನೇ ಮಹಡಿಯಲ್ಲಿ ಸೆಂಟ್ರಿಂಗ್​ ಕೆಲಸಕ್ಕೆಂದು ಮರದ ಕಂಬಗಳನ್ನು ಅಳವಡಿಸಲಾಗಿತ್ತು. ಕಂಬವೊಂದು ವಿದ್ಯಾರ್ಥಿನಿಯ ತಲೆ ಮೇಲೆ ಬಿದ್ದಿದೆ. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

‘ಕಾಮಗಾರಿ ವೇಳೆ ಕಟ್ಟಡದ ಮಾಲೀಕ ಹಾಗೂ ಗುತ್ತಿಗೆದಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರತಿಭಟನೆ– ಆಕ್ರೋಶ: ಕಟ್ಟಡದ ಮಾಲೀಕರು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿದ್ಯಾರ್ಥಿನಿ ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

‘ಅಪ್ಪು’ ಡಾನ್ಸ್‌ ಅಕಾಡೆಮಿಯಲ್ಲಿ ತೇಜಸ್ವಿನಿ ನೃತ್ಯ ತರಬೇತಿ ಪಡೆಯುತ್ತಿದ್ದಳು. ನೃತ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಆಸೆಯಿತ್ತು. ಹಲವು ನೃತ್ಯ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಬಹುಮಾನ ಗಳಿಸಿದ್ದಳು’ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.