ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ಪ್ರತಿಭಟನೆ ಕೈಬಿಟ್ಟ ವಿದ್ಯಾರ್ಥಿಗಳು

ವಿ.ವಿ ಆವರಣದಲ್ಲಿ ರಾತ್ರಿಯಿಡೀ ಪ್ರತಿಭಟನೆ l ವಿ.ಸೋಮಣ್ಣ, ಎಸ್‌.ಟಿ. ಸೋಮಶೇಖರ್ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 1:54 IST
Last Updated 12 ಅಕ್ಟೋಬರ್ 2022, 1:54 IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ‘ಆವರಣದಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧಿಸಿ’ ಎಂದು ಘೋಷಣೆ ಕೂಗಿದರು  – ಪ್ರಜಾವಾಣಿ ಚಿತ್ರ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ‘ಆವರಣದಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧಿಸಿ’ ಎಂದು ಘೋಷಣೆ ಕೂಗಿದರು  – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧಿಸಬೇಕು’ ಎಂದು ಒತ್ತಾಯಿಸಿ ಸೋಮವಾರದಿಂದ ಆರಂಭಿಸಿದ್ದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮಂಗಳವಾರ ಅಂತ್ಯಗೊಳಿಸಿದರು.

ಜ್ಞಾನಭಾರತಿ ಆವರಣದಲ್ಲಿ ಬಿಎಂಟಿಸಿ ಬಸ್‌ ಮೈ ಮೇಲೆ ಹರಿದು ಎಂ.ಎಸ್ಸಿ ವಿದ್ಯಾರ್ಥಿನಿ ಶಿಲ್ಪಶ್ರೀ (22) ತೀವ್ರ ಗಾಯಗೊಂಡಿದ್ದರು. ಅಪಘಾತದಿಂದ ಆಕ್ರೋಶಗೊಂಡಿದ್ದ ವಿದ್ಯಾರ್ಥಿಗಳು, ಆವರಣದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ ಆರಂಭಿಸಿದ್ದರು. ಇದರಿಂದಾಗಿ ಅಕ್ಕ–ಪಕ್ಕದ ಪ್ರದೇಶಗಳ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿತ್ತು.

ಕುಲಪತಿ ಡಾ. ಎಸ್.ಎಂ. ಜಯಕರ್ ಹಾಗೂ ಬಿಎಂಟಿಸಿ ಹಿರಿಯ ಅಧಿಕಾರಿಗಳು ಮನವೊಲಿಸಿದರೂ ವಿದ್ಯಾರ್ಥಿಗಳು ಪ್ರತಿಭಟನೆ ಕೈ
ಬಿಟ್ಟಿರಲಿಲ್ಲ. ರಾತ್ರಿಯಿಡೀ ಪ್ರತಿಭಟನೆ
ಮುಂದುವರಿಸಿದ್ದರು. ಮಂಗಳವಾರ ಬೆಳಿಗ್ಗೆಯೂ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಹಾಗೂ ಶಿಕ್ಷಕರ ಪರಿಷತ್ ಸಹ ಪ್ರತಿಭಟನೆಗೆ ಬೆಂಬಲ ನೀಡಿತ್ತು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ADVERTISEMENT

ಮಂಗಳವಾರವೂ ರಸ್ತೆಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು, ‘ಜ್ಞಾನಭಾರತಿ ಆವರಣದಲ್ಲಿ ಬಿಎಂಟಿಸಿ ಬಸ್‌ ಹಾಗೂ ಇತರೆ ಎಲ್ಲ ಖಾಸಗಿ ವಾಹನಗಳ ಸಂಚಾರ ನಿರ್ಬಂಧಿಸಬೇಕು. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಪಟ್ಟು ಹಿಡಿದಿದ್ದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರಾದ ವಿ.ಸೋಮಣ್ಣ ಹಾಗೂ ಎಸ್‌.ಟಿ. ಸೋಮಶೇಖರ್, ‘ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಜೊತೆ ಮಾತನಾಡಿದ್ದಾರೆ. ಸದ್ಯಕ್ಕೆ ಪ್ರತಿಭಟನೆ ಹಿಂಪಡೆಯಿರಿ. ವಾಹನಗಳ
ಸಂಚಾರ ನಿರ್ಬಂಧಿಸುವ ಬಗ್ಗೆ ಚರ್ಚೆ ನಡೆಸಿ, ಕೆಲವೇ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಇದಕ್ಕೆ ಒಪ್ಪಿದ ವಿದ್ಯಾರ್ಥಿಗಳು, ‘ಕೊಟ್ಟ ಭರವಸೆ ಈಡೇರಿಸಬೇಕು. ಇಲ್ಲದಿದ್ದರೆ, ಪುನಃ ಪ್ರತಿಭಟನೆ
ಆರಂಭಿಸಲಾಗುವುದು’ ಎಂದು ಎಚ್ಚರಿಸಿ ಪ್ರತಿಭಟನೆ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.