ಎಚ್.ಸಿ. ಮಹದೇವಪ್ಪ
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ ಇದೇ 10ರಂದು ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಸಂಚಾಲಕ ಬಸವರಾಜ ಕೌತಾಳ, ‘ಎಚ್.ಎನ್. ನಾಗಮೋಹನದಾಸ್ ಆಯೋಗವು ಪರಿಶಿಷ್ಟ ಜಾತಿಗಳನ್ನು ಐದು ಪ್ರವರ್ಗ ಗಳನ್ನಾಗಿ ಮಾಡಿ ಒಳ ಮೀಸಲಾತಿ ಸಂಬಂಧ ಏಳು ಶಿಫಾರಸುಗಳನ್ನು ಮಾಡಿತ್ತು. ಆದರೆ, ಸರ್ಕಾರ ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ, ಪ್ರವರ್ಗ ‘ಎ’ಗೆ ಶೇಕಡ 6, ಪ್ರವರ್ಗ ‘ಬಿ’ಗೆ ಶೇ 6 ಹಾಗೂ ಪ್ರವರ್ಗ ‘ಸಿ’ಗೆ ಶೇ 5ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದೆ. ಆದರೆ, ಇದುವರೆಗೂ ಜಾರಿಗೊಳಿಸಿಲ್ಲ’ ಎಂದು ಆರೋಪಿಸಿದರು.
‘ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್ ಅವರು ಸರ್ಕಾರದಿಂದ ಬಂದ ಕಡತಕ್ಕೆ ಒಪ್ಪಿಗೆ ಸೂಚಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಒಳ ಮೀಸಲಾತಿ ನೇರ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ. ಬಡ್ತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಅನ್ವಯಿಸುವುದಿಲ್ಲ ಎಂದು ದಾರಿ ತಪ್ಪಿಸುತ್ತಿದ್ದಾರೆ. ಮಹದೇವಪ್ಪ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.