ADVERTISEMENT

ಎಂಎಸ್‌ಪಿಗೆ ಕಾನೂನು ರೂಪಿಸಿ: ಕುರುಬೂರು ಆಗ್ರಹ

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 14:08 IST
Last Updated 21 ಫೆಬ್ರುವರಿ 2024, 14:08 IST
   

ಬೆಂಗಳೂರು: ‘ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಶಾಸನಬದ್ಧ ಕಾನೂನು ರೂಪಿಸಿ ಜಾರಿಗೊಳಿಸಬೇಕು’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರವೇ ನಿಗದಿ ಮಾಡುವ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ರೈತರು ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರನ್ನು ಭಯೋತ್ಪಾದಕರು, ದೇಶದ್ರೋಹಿಗಳು ಹಾಗೂ ಖಾಲಿಸ್ತಾನಿಗಳೆಂದು ಕರೆಯುತ್ತಿದೆ. ರೈತ ಚಳವಳಿಯಲ್ಲಿ ಭಾಗವಹಿಸಲು ಬರುವ ರೈತರ ಮೇಲೆ ರಬ್ಬರ್‌ ಬುಲ್‌ಟ್‌ಗಳು ಹಾಗೂ ಅಶ್ರುವಾಯು ಪ್ರಯೋಗಿಸುತ್ತಿದೆ’ ಎಂದು ಆರೋಪಿಸಿದರು.

‘ರೈತರ ಸಾಲ ಮನ್ನಾ, ಎಂ.ಎಸ್. ಸ್ವಾಮಿನಾಥನ್‌ ವರದಿಯಂತೆ ಕನಿಷ್ಠ ಬೆಂಬಲ ಬೆಲೆ, ರೈತರಿಗೆ ಪಿಂಚಣಿ ನೀಡುವ ಯೋಜನೆ ಜಾರಿಗೊಳಿಸಬೇಕು. ಫಸಲ್‌ ಬಿಮಾ ಹಾಗೂ ಬೆಳೆವಿಮೆ ಪದ್ಧತಿಯನ್ನು ಬದಲಾಯಿಸಬೇಕು. ಕಳೆದ ವರ್ಷ ದೆಹಲಿಯಲ್ಲಿ ನಡೆದ ರೈತ ಹೋರಾಟದಲ್ಲಿ ಹುತಾತ್ಮರಾದ 750 ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೆರವು ನೀಡಬೇಕು. ಹುತಾತ್ಮ ರೈತರ ಮನೆಯ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ ರೆಡ್ಡಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ನೆಲಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ರಾಜೇಶ್, ಹಾರೋಹಳ್ಳಿ ಗಜೇಂದ್ರಸಿಂಗ್, ಕನಕಪುರ ಶಿವಕುಮಾರ್, ನರಸಿಂಹಯ್ಯ, ವೆಂಕಟೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.