ADVERTISEMENT

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವತಿಯ ರಕ್ಷಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 20:03 IST
Last Updated 7 ಫೆಬ್ರುವರಿ 2021, 20:03 IST

ಬೆಂಗಳೂರು: ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹಳಿ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಯುವತಿಯನ್ನು ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ರಕ್ಷಿಸಿದ್ದಾರೆ.

‘ಯಶವಂತಪುರ ನಿವಾಸಿಯಾದ 20 ವರ್ಷದ ಯುವತಿ, ಪದವೀಧರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ವರ್ಷಗಳ ಹಿಂದಷ್ಟೇ ಮದುವೆಯಾಗಿತ್ತು. ಅವರು ಆತ್ಮಹತ್ಯೆ ಯತ್ನಿಸುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಅವರನ್ನು ರಕ್ಷಿಸಿ ಪೋಷಕರ ಜೊತೆ ಕಳುಹಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಕ್ಷುಲ್ಲಕ ಕಾರಣಕ್ಕಾಗಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ಯುವತಿ, ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಜಾಲಹಳ್ಳಿಯ ಜೆ.ಪಿ.ಪಾರ್ಕ್ ಸಮೀಪದ ರೈಲ್ವೆ ಹಳಿ ಮೇಲೆ ನಿಂತಿದ್ದರು. ಅದನ್ನು ಗಮನಿಸಿದ ಸ್ಥಳೀಯರು, ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಹೊಯ್ಸಳ ಗಸ್ತು ವಾಹನದಲ್ಲಿದ್ದ ಭಾಗ್ಯಮ್ಮ ಹಾಗೂ ಮತ್ತೊಬ್ಬ ಸಿಬ್ಬಂದಿ, ಕೂಡಲೇ ಸ್ಥಳಕ್ಕೆ ಹೋಗಿ ಯುವತಿಯನ್ನು ರಕ್ಷಿಸಿದ್ದಾರೆ. ಪತಿ ಹಾಗೂ ಅವರ ಕುಟುಂಬದವರನ್ನು ಠಾಣೆಗೆ ಕರೆಸಿ, ಅವರ ಸಮ್ಮುಖದಲ್ಲೇ ಯುವತಿಗೆ ಬುದ್ದಿವಾದ ಹೇಳಿ ಕಳುಹಿಸಲಾಗಿದೆ’ ಎಂದೂ ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.