ADVERTISEMENT

ಚುನಾವಣಾ ತಕರಾರು ಅರ್ಜಿ: ಸೂರಜ್ ರೇವಣ್ಣಗೆ ಸಮನ್ಸ್ ಜಾರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 19:22 IST
Last Updated 8 ಏಪ್ರಿಲ್ 2022, 19:22 IST
ಸೂರಜ್ ರೇವಣ್ಣ
ಸೂರಜ್ ರೇವಣ್ಣ   

ಬೆಂಗಳೂರು: ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಡಾ.ಸೂರಜ್ ರೇವಣ್ಣ ಅವರಿಗೆ ಹಾಸನ ಜಿಲ್ಲಾ ನ್ಯಾಯಾಲಯದ ಮೂಲಕ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

‘ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಆಯ್ಕೆಯಾಗಿದ್ದು ಈ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಬೇಕು’ ಎಂದು ಕೋರಿ ಹೊಳೆನರಸೀಪುರದ ಕಾಮಸಮುದ್ರದ ಎಲ್. ಹನುಮೇಗೌಡ ಸಲ್ಲಿಸಿರುವ ಈ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ, ‘ಈವರೆಗೂ ಸೂರಜ್ ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ, ಸೂರಜ್ ರೇವಣ್ಣ ಅವರಿಗೆ ಹಾಸನ ಜಿಲ್ಲಾ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

‘ಸೂರಜ್ ರೇವಣ್ಣ ತಮ್ಮ ಹಾಗೂ ಮಡದಿಯ ಬ್ಯಾಂಕ್ ಖಾತೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಆದ್ದರಿಂದ, ಅವರ ಆಯ್ಕೆ ಅಸಿಂಧುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.