ADVERTISEMENT

ಘೋಷಣೆಯಾಗದ ಪ್ರಶಸ್ತಿ ಪಟ್ಟಿ: ಶಿಕ್ಷಕರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 16:18 IST
Last Updated 4 ಸೆಪ್ಟೆಂಬರ್ 2020, 16:18 IST

ಬೆಂಗಳೂರು: ಶಿಕ್ಷಕರ ದಿನಾಚರಣೆಯ ಹಿಂದಿನ ದಿನದವರೆಗೂ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದವರ ಪಟ್ಟಿ ಪ್ರಕಟಿಸದ ರಾಜ್ಯಸರ್ಕಾರದ ವಿರುದ್ಧ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿಯನ್ನು ಶಿಕ್ಷಕರ ದಿನಾಚರಣೆಗೂ 15–20 ದಿನಗಳಿಗೆ ಮೊದಲೇ ಘೋಷಣೆ ಮಾಡುತ್ತಾರೆ. ಆದರೆ, ರಾಜ್ಯ ಸರ್ಕಾರವು ಈವರೆಗೆ ಪಟ್ಟಿ ಪ್ರಕಟಿಸದಿರುವುದು ಸರಿಯಲ್ಲ’ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಶಿಕ್ಷಕರ ದಿನದಂದೇ ಪ್ರಶಸ್ತಿ ಸ್ವೀಕರಿಸಬೇಕು ಎಂಬ ಹಂಬಲ ಎಲ್ಲ ಶಿಕ್ಷಕರದ್ದಾಗಿರುತ್ತದೆ. ಸರ್ಕಾರವು ರಾಜ್ಯಮಟ್ಟದಲ್ಲಿ ಕಾರ್ಯಕ್ರಮ ಮಾಡದಿದ್ದರೂ, ಪಟ್ಟಿಯನ್ನಾದರೂ ಘೋಷಣೆ ಮಾಡಬೇಕಿತ್ತು. ಆಗ ಆಯಾ ಜಿಲ್ಲೆ, ಆಯಾ ಶಾಲೆಯಲ್ಲಾದರೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಬಹುದಾಗಿತ್ತು’ ಎಂದು ಅವರು ಹೇಳಿದರು.

ADVERTISEMENT

‘ಪಟ್ಟಿ ಸಿದ್ಧವಾಗಿದೆ. ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ, ಶಿಕ್ಷಕರನ್ನು ಸನ್ಮಾನಿಸಬೇಕು ಎಂಬುದು ನಮ್ಮ ಅಪೇಕ್ಷೆ. ಆದರೆ, ಈ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ. ಜಗದೀಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.