ADVERTISEMENT

ಪೂರ್ವ ತಯಾರಿ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯುಕ್ತ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 20:11 IST
Last Updated 9 ಮಾರ್ಚ್ 2023, 20:11 IST
ರಾಜೀವ್ ಕುಮಾರ್
ರಾಜೀವ್ ಕುಮಾರ್   

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿಗಳು ಮತ್ತು ಅಗತ್ಯ ಸಿದ್ಧತೆಗಳನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಪರಿಶೀಲಿಸಿತು.

ಚುನಾವಣಾ ಆಯುಕ್ತರಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್, ಉಪ ಆಯುಕ್ತರುಗಳು ಮತ್ತು ಆಯೋಗದ ಹಿರಿಯ ಅಧಿಕಾರಿಗಳು ಕೇಂದ್ರ ತಂಡದಲ್ಲಿದ್ದಾರೆ.

ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಮೊದಲು ಪ್ರತ್ಯೇಕ ಸಭೆ ನಡೆಸಿದ ಕೇಂದ್ರ ತಂಡ, ಅವರಿಂದ ಸಲಹೆ, ಅಭಿಪ್ರಾಯಗಳನ್ನು ಪಡೆಯಿತು. ಬಳಿಕ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್‌ ಮೀನಾ, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಗಳಾದ ಎಂ. ವೆಂಕಟೇಶ್ ಕುಮಾರ್, ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಮಾಹಿತಿ ಪಡೆಯಿತು. ರಾಜೀವ್ ಕುಮಾರ್ ಅವರು ಅನೇಕ ಸಲಹೆ-ಸೂಚನೆಗಳನ್ನು
ನೀಡಿದರು.

ADVERTISEMENT

ಕೇಂದ್ರ ತಂಡವು ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳ ಜೊತೆ ಶುಕ್ರವಾರ ಸಭೆ ನಡೆಸಲಿದೆ. ಬಳಿಕ ನಗರದ ಐಐಎಸ್‍ಸಿ ಆವರಣದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬಿಬಿಎಂಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ, ಏಕಥಾನ್ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ರಾಜೀವ್ ಕುಮಾರ್ ಚಾಲನೆ ನೀಡಲಿದ್ದಾರೆ. ನಂತರ ನಡೆಯಲಿರುವ ವಿಶೇಷ ಸಂವಾದದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ಅಂಗವಿಕಲರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಗಣ್ಯರು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.