ಬೆಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಆರೋಪಿ ಮೂರ್ತಿಯನ್ನು (27) ಬಂಡೇಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ₹3.5 ಲಕ್ಷ ಮೌಲ್ಯದ 83 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಫೆಬ್ರುವರಿ 28ರಂದು ಬಂಡೇಪಾಳ್ಯದ ಅಣ್ಣಮ್ಮನ ಪಾಳ್ಯದಲ್ಲಿನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಹೊಂಗಸಂದ್ರ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಶ್ಯಾಮರಾಜಪುರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸಂಜಯ್ ಎಂಬಾತನನ್ನು ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಎರಡು ಕೆ.ಜಿ ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಮಾರ್ಚ್ 5ರಂದು ದೇಗುಲದ ಬೆಳ್ಳಿ ತಟ್ಟೆ, 15 ಬೆಳ್ಳಿ ಬಟ್ಟಲು, ಹಸುವಿನ ಬೆಳ್ಳಿ ವಿಗ್ರಹ, ನಾಲ್ಕು ತಾಳಿ, ಕಾಸಿನ ಸರವನ್ನು ಆರೋಪಿ ಕದ್ದಿದ್ದ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಮೊಬೈಲ್ ಲೊಕೇಶನ್ ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು. ಸಂಜಯ್ ವಿರುದ್ಧ ಈ ಹಿಂದೆ ಮೂರು ಪ್ರಕರಣ ದಾಖಲಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.