ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಿಂದೆ ಜನರ ಆಕ್ರೋಶಕ್ಕೆ ತುತ್ತಾಗಿದ್ದ ವಾಹನಗಳ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಜಾರಿ ಮಾಡಲು ನಗರ ಪೊಲೀಸರು ಮುಂದಾಗಿದ್ದಾರೆ. ಈ ಕ್ರಮಕ್ಕೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಪಾರ್ಕಿಂಗ್ ವ್ಯವಸ್ಥೆ ಮಾಡುವ ಉದ್ದೇಶದಿಂದ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ ಟೋಯಿಂಗ್ ವ್ಯವಸ್ಥೆಯನ್ನು ಜಾರಿ ಮಾಡುವ ಕುರಿತು ಚರ್ಚೆ ನಡೆದಿತ್ತು. ಮಂಗಳವಾರ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲು ತೀರ್ಮಾನಿಸಲಾಗಿದೆ. ವಾಹನ ನಿಲುಗಡೆ ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಸಿಬ್ಬಂದಿ ಟೋಯಿಂಗ್ ಮಾಡಿ, ನಿಗದಿತ ನಿಲುಗಡೆ ಸ್ಥಳಕ್ಕೆ ತಂದು ಇಳಿಸುವ ವ್ಯವಸ್ಥೆ ಸದ್ಯದಲ್ಲೇ ಜಾರಿ ಆಗಲಿದೆ.
ಪರಮೇಶ್ವರ ಮಾತನಾಡಿ, ‘ನಗರದಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗುವುದು. ಟೋಯಿಂಗ್ ಮಾಡಲು ಇಲಾಖೆಯ ಸಿಬ್ಬಂದಿ ಮತ್ತು ವಾಹನಗಳನ್ನೇ ಬಳಸಿಕೊಳ್ಳಲಾಗುವುದು. ಸಂಚಾರ ದಟ್ಟಣೆ ಸಮಸ್ಯೆಯ ಪರಿಹಾರಕ್ಕೆ ಬಿಬಿಎಂಪಿ ಜೊತೆಗೂಡಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
‘ನಗರದಲ್ಲಿ ಮಳೆ ಬಂದಾಗ ತೀವ್ರ ಸಮಸ್ಯೆಯಾಗುತ್ತಿದೆ. ಪ್ರಮುಖವಾಗಿ 19 ಕಡೆ ಹೆಚ್ಚು ಒತ್ತಡ ಇದೆ. ಎಂಟು ಕಡೆ ಹೆಚ್ಚಿನ ದಟ್ಟಣೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಒಟ್ಟಾಗಿ ಕೆಲಸ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಟ್ರಾಫಿಕ್ ಸಮಸ್ಯೆಯ ಕುರಿತಂತೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ನಗರ ಪೊಲೀಸರಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರೊಂದಿಗೆ ಸಭೆ ಕರೆದು ಚರ್ಚಿಸಲಾಗುವುದು’ ಎಂದು ಹೇಳಿದರು.
ರಾಜ್ಯದಲ್ಲಿ ಮಾದಕ ವಸ್ತುಗಳ ದಂಧೆಯನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಡ್ರಗ್ಸ್ ಚಟುವಟಿಕೆಯನ್ನು ಪೂರ್ಣ ಮಟ್ಟ ಹಾಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ನಿರ್ಲಕ್ಷ್ಯ ಮಾಡಿದರೆ ಪೊಲೀಸ್ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ತಿಳಿಸಿದರು.
ರಿಯಲ್ ಎಸ್ಟೇಟ್ ದಂಧೆಯ ಏಜೆಂಟ್‌ಗಳೊಂದಿಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಶಾಮೀಲಾಗುವುದನ್ನು ಸಹಿಸುವುದಿಲ್ಲ. ಶಾಮೀಲಾಗಿದ್ದು ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವರು ಹೇಳಿದರು.
‘ನಿರ್ಭಯಾ ಯೋಜನೆ’ಯಡಿ ನಗರದಾದ್ಯಂತ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ. ನಗರದಲ್ಲಿ ನೆಲಸಿರುವ ವಿದೇಶಿಯರ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದೇನೆ. ಅಕ್ರಮ ವಲಸಿಗರ ಮಾಹಿತಿಯೂ ಗೊತ್ತಾಗುತ್ತದೆ’ ಎಂದು ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ರಮೇಶ್ ಬಾನೋತ್, ವಿಕಾಶ್‌ಕುಮಾರ್ ವಿಕಾಶ್ ಹಾಗೂ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಸಿಸಿಬಿ ವಿಭಾಗದ ಜಂಟಿ ಕಮಿಷನರ್ ಚಂದ್ರಗುಪ್ತ ಹಾಗೂ ವಿವಿಧ ವಿಭಾಗಗಳ ಡಿಸಿಪಿಗಳು ಪಾಲ್ಗೊಂಡಿದ್ದರು.
ಬೆಂಗಳೂರಿನ ಸಂಚಾರ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದುಜಿ.ಪರಮೇಶ್ವರ, ಗೃಹ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.