
ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ ಸುಕನ್ಯಾ ಅವರ ಮೇಲೆ ಹಲ್ಲೆ ನಡೆಸಿ, ತಲೆ ಬೋಳಿಸಿದ ಕೃತ್ಯ ಖಂಡನೀಯ ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ (ಎಂಜಿಎಸ್‌ಪಿ) ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಜಿಎಸ್‌ಪಿ ಅಧ್ಯಕ್ಷೆ ವೈಶಾಲಿ, ‘ಸುಕನ್ಯಾ ಅವರನ್ನು ದುಷ್ಕರ್ಮಿಗಳು ಅಪಹರಿಸಿ ರೂಪೇನ ಅಗ್ರಹಾರಕ್ಕೆ ಕರೆದೊಯ್ದು ಅಕ್ರಮವಾಗಿ ಬಂಧನದಲ್ಲಿರಿಸಿ, ಕಟ್ಟಿಗೆಯಿಂದ ಹೊಡೆದು, ಅವರ ತಲೆ ಬೋಳಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿ, ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.
‘ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ನೇಮಕಾತಿ, ಉದ್ಯಮಶೀಲತೆ ಯೋಜನೆಗಳು ಸೇರಿದಂತೆ ಕೌಶಲ ಅಭಿವೃದ್ಧಿ ಮತ್ತು ಸಾಮರ್ಥ್ಯ ಅಭಿವೃದ್ಥಿ ಕಾರ್ಯಕ್ರಮಗಳನ್ನು ರೂಪಿಸಿ, ಜೀವನೋಪಾಯದ ಅವಕಾಶಗಳನ್ನು ಒದಗಿಸಬೇಕು. ಸರ್ಕಾರ ನಮ್ಮ ಸಮುದಾಯದವರಿಗೆ ಸುರಕ್ಷತೆ, ವಸತಿ ಸೌಲಭ್ಯಗಳನ್ನು ನೀಡಬೇಕು’ ಎಂದು ಹೇಳಿದರು.
ರಾಜೇಶ್ ಶ್ರೀನಿವಾಸ್, ಕೃತಿಕಾ, ಮೋನಿಕಾ, ವಕೀಲರಾದ ಬಿ.ಟಿ. ವೆಂಕಟೇಶ್, ಆಶಾ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.