ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು
–ಪ್ರಜಾವಾಣಿ ಚಿತ್ರ
ಬೆಂಗಳೂರು: 38 ತಿಂಗಳ ಹಿಂಬಾಕಿ ಪಾವತಿ, 2024ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಸರ್ಕಾರ ಆಗಸ್ಟ್ 4ರೊಳಗೆ ಬೇಡಿಕೆ ಈಡೇರಿಸದಿದ್ದರೆ, ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದರು.
‘2020ರ ಜನವರಿ 1ರಿಂದ ಸಾರಿಗೆ ನೌಕರರ ವೇತನ ಶೇ 15ರಷ್ಟು ಹೆಚ್ಚಳವಾಗಿತ್ತು. ಪರಿಷ್ಕರಣೆ ನಂತರದ 38 ತಿಂಗಳ ಹಣ ನೀಡುವುದು ಬಾಕಿ ಇದೆ. 2023ರ ಡಿಸೆಂಬರ್ 31ರಂದು ಇದ್ದ ಮೂಲ ವೇತನದಲ್ಲಿ ಶೇ 31ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ, 2024ರ ಜನವರಿ 1ರಿಂದ ಅನ್ವಯವಾಗುವಂತೆ ಶೇ 25ರಷ್ಟು ವೇತನ ಹೆಚ್ಚಿಸಬೇಕು’ ಎಂದು ಪ್ರತಿಭಟನಕಾರರು ಸರ್ಕಾರವನ್ನು ಆಗ್ರಹಿಸಿದರು.
ಏಪ್ರಿಲ್ 15ರಂದು ಕರೆದಿದ್ದ ಸಭೆಯಲ್ಲಿ ‘ನಮ್ಮ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ, ಜುಲೈ 4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾರಿಗೆ ನಿಗಮಗಳ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಬೇಕಾಗಿಲ್ಲ. 2027ರವರೆಗೆ ವೇತನ ಪರಿಷ್ಕರಣೆ ಮಾಡುವುದಿಲ್ಲ ಎಂದು ತೀರ್ಮಾನ ಮಾಡಿದ್ದಾರೆ. ಹೀಗಾಗಿ ಮುಷ್ಕರದ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ’ ಎಂದು ಪ್ರತಿಭಟನಕಾರರು ತಿಳಿಸಿದರು.
ಉಪವಾಸ ಸತ್ಯಾಗ್ರಹದಲ್ಲಿ ಜಂಟಿ ಕ್ರಿಯಾ ಸಮಿತಿಯ ವಿವಿಧ ಸಂಘಟನೆಗಳ ಮುಖಂಡರಾದ ಎಚ್.ವಿ. ಅನಂತಸುಬ್ಬರಾವ್, ಬಿ.ಜಯದೇವರಾಜೇ ಅರಸು, ಎಚ್.ಡಿ.ರೇವಪ್ಪ, ವೆಂಕಟರಮಣಪ್ಪ, ಎ.ಸೋಮಣ್ಣ ಸೇರಿದಂತೆ ನೂರಾರು ಸದಸ್ಯರು ಪಾಲ್ಗೊಂಡಿದ್ದರು.
ಮುಷ್ಕರಕ್ಕೆ ಬಾಹ್ಯ ಬೆಂಬಲ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬಾಹ್ಯ ಬೆಂಬಲ ನೀಡಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ತಿಳಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸುರೇಶ ನಾಡಗೇರ ‘2021ರ ಸಾರಿಗೆ ಮುಷ್ಕರದ ಸಮಯದಲ್ಲಿ ನೌಕರರನ್ನು ವಜಾ ಮಾಡಿರುವ ಆದೇಶವನ್ನು ರದ್ದುಗೊಳಿಸಬೇಕು. ಚಾಲಕರು ಮತ್ತು ನಿರ್ವಾಹಕ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ನಾಲ್ಕು ನಿಗಮಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.