ADVERTISEMENT

ಸರಕು ವಾಹನಗಳಲ್ಲಿ ಪ್ರಯಾಣಿಕರು: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 20:11 IST
Last Updated 21 ಮಾರ್ಚ್ 2019, 20:11 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕೊಂಡೊಯ್ಯುವುದನ್ನು ತಡೆಯಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಂಚಾಟೆ ಸಂಜೀವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಎಂಟು ಜನ ಪ್ರತಿವಾದಿಗಳು ಮುಂದಿನ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿತು.

ADVERTISEMENT

‘ಸರಕು ಸಾಗಣೆ ವಾಹಗಳಲ್ಲಿ ಮಕ್ಕಳು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿದಂತೆ ಸಾಮಾನ್ಯ ಪ್ರಯಾಣಿಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯುವುದು ಸಾರಿಗೆ ಮತ್ತು ಸಂಚಾರ ಕಾಯ್ದೆಗಳ ಉಲ್ಲಂಘನೆ. ಅಂತೆಯೇ ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆಯೂ ಆಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

‘ಸುರಕ್ಷಿತ, ಸುಲಭ ಮತ್ತು ಕೈಗೆಟಕುವ ಸಾರಿಗೆ ಸೌಲಭ್ಯ ಒದಗಿಸಲು ರಾಜ್ಯಮಟ್ಟದ ನೀತಿ ರೂಪಿಸಲು ನಿರ್ದೇಶಿಸಬೇಕು. ಈ ದಿಸೆಯಲ್ಲಿ ಅಧಿಕಾರಿಗಳು, ರಸ್ತೆ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಮಕ್ಕಳ ಹಕ್ಕುಗಳ ತಜ್ಞರು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಅಂತರ್ ಇಲಾಖಾ ಸಮಿತಿ ರಚಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.